ಒಂದನೇ ತರಗತಿಯಿಂದ ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್: ತನ್ವೀರ್ ಸೇಠ್

ಬೆಂಗಳೂರು, ಜು.13: ಪ್ರಸಕ್ತ ವರ್ಷದಿಂದಲೇ ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ವಿಷಯವನ್ನು ಪರಿಚಯಿಸಲಾಗುತ್ತಿದೆ ಎಂದು ಪ್ರಾಥಮಿ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಗುರುವಾರ ನಗರದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಎಲ್ಲ ಸರಕಾರಿ ಶಾಲೆಗಳಿಗೆ ಇಂಗ್ಲಿಷ್ ಪಠ್ಯಪುಸ್ತಕವನ್ನು ಸರಬರಾಜು ಮಾಡಲಾಗಿದ್ದು, ಇಂಗ್ಲಿಷ್ ಬೋಧಿಸುವ ಶಿಕ್ಷಕರಿಗೆ ವಿಶೇಷ ತರಬೇತಿ ಕೊಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಾಥಮಿಕ ಶಾಲೆಯ 5400 ಶಿಕ್ಷಕರಿಗೆ ಇಂಗ್ಲಿಷ್ ತರಬೇತಿಯನ್ನು ನೀಡಲಾಗಿದ್ದು, ಇದನ್ನು ನಿರಂತರವಾಗಿ ಮುಂದುವರಿಸಲಾಗುವುದು. ಹಾಗೆಯೇ ಗಡಿನಾಡು ಪ್ರದೇಶದಲ್ಲಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಟಾಳ್ ನಾಗರಾಜು ಹಾಗೂ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಸರಕಾರ ಪರಿಶೀಲಿಸುತ್ತಿದ್ದು, ಈ ವರದಿಗಳಲ್ಲಿರುವ ಉತ್ತಮ ಅಂಶಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಅವರು ಹೇಳಿದರು.







