ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಸಮಿತಿ ರಚನೆ: ಸಿದ್ದರಾಮಯ್ಯ
ಒಂದು ತಿಂಗಳೊಳಗೆ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು, ಜು.14: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ 2 ಕೋಟಿ ರೂ.ಮೊತ್ತದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಸಮಿತಿಯನ್ನು ರಚಿಸಲಾಗಿದ್ದು, ಒಂದು ತಿಂಗಳೊಳಗೆ ಸಮಗ್ರ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ರೂಪಾ ಅವರು, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾಗೆ ವಿಶೇಷ ವ್ಯವಸ್ಥೆ ಮಾಡಲು ಕಾರಾಗೃಹಗಳ ಇಲಾಖೆಯ ಡಿಜಿಪಿ ಎಚ್.ಎನ್.ಸತ್ಯನಾರಾಯಣರಾವ್ 2 ಕೋಟಿ ರೂ.ಲಂಚ ಪಡೆದಿದ್ದಾರೆ ಎಂದು ಡಿಐಜಿ ಡಿ.ರೂಪಾ ಆರೋಪಿಸಿದ್ದಾರೆ. ಈ ಕುರಿತು ತನಿಖಾ ತಂಡವು ಒಂದು ವಾರದೊಳಗೆ ಪ್ರಾಥಮಿಕ ತನಿಖೆ ಹಾಗೂ ಒಂದು ತಿಂಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ರೂಪಾಗೆ ನೋಟಿಸ್: ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ನಡೆಯುವ ಘಟನೆಗಳನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಬಾರದೆಂದು ನಿಯಮವಿದೆ. ಆದರೆ, ಡಿಐಜಿ ಡಿ.ರೂಪಾ ಕಾನೂನನ್ನು ಮೀರಿ ಟಿವಿ ಹಾಗೂ ಪತ್ರಿಕೆಗಳಲ್ಲಿ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ಮಾತನಾಡಿದ್ದಾರೆ. ಈ ಕುರಿತು ಸ್ಪಷ್ಟನೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.





