ರಾಜ್ಯ ಸರಕಾರದ ಆದೇಶ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳ್ತಂಗಡಿ, ಜು. 17: ಸರಕಾರಿ ಕಾಲೇಜುಗಳನ್ನು ಬೆಳಗ್ಗೆ 8 ಗಂಟೆಗೆ ಪ್ರಾರಂಭಿಸಬೇಕು ಎಂಬ ರಾಜ್ಯ ಸರಕಾರದ ಆದೇಶವನ್ನು ವಿರೋಧಿಸಿ ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾಲೇಜಿಗೆ ಗ್ರಾಮೀಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳೇ ಹೆಚ್ಚಾಗಿದ್ದು ಬೆಳಗ್ಗೆ 8 ಗಂಟೆಗೆ ಕಾಲೇಜು ತಲುಪುವುದು ಅಸಾಧ್ಯವಾಗುತ್ತದೆ. ಪರೀಕ್ಷೆಗಳಿಗೆ ಹಾಜರಾಗುವುದು ಕೂಡ ಕಷ್ಟವಾಗಲಿದೆ. ಇದರಿಂದ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗುವ ಬದಲು ಗ್ರಾಮೀಣ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಿಗೆ ಬರುವುದು ಕಡಿಮೆಯಾಗುವ ಮತ್ತು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆಗಳೇ ಹೆಚ್ಚಾಗಿದೆ. ಹೀಗಾಗಿ ಈ ಆದೇಶವನ್ನು ಸರಕಾರ ಕೂಡಲೇ ಹಿಂಪಡೆಯಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ಸಂದರ್ಭ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಸುಮಾರು 800 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಎಲ್ಲಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಕಾಲೇಜಿನ ಪ್ರಾಚಾರ್ಯರ ಮೂಲಕ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದರು.





