ಕನ್ನಡ ವಿರೋಧಿ ಅಧಿಕಾರಿ ಉಮಾ ಮಹದೇವನ್ ವಿರುದ್ಧ ಸೂಕ್ತ ಕ್ರಮಕ್ಕೆ ಎಸ್.ಜಿ.ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಜು.21: ಕನ್ನಡ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಮಹದೇವನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾಗೆ ಪತ್ರ ಬರೆದಿರುವ ಅವರು, ಇಲಾಖೆಯ ಕಾರ್ಯದರ್ಶಿ ಉಮಾ ಮಹದೇವನ್ ಹಲವು ಬಾರಿ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವುದರ ಕುರಿತು ಇಲಾಖೆಯ ಸಚಿವೆ ಉಮಾಶ್ರೀ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದಾರೆ ಎಂದು ತಿಳಿಸಿದರು. ಸಚಿವೆ ಉಮಾಶ್ರೀ ನೀಡಿರುವ ದೂರನ್ನು ಪರಿಶೀಲಿಸಿದಾಗ ಇಲಾಖೆಯ ಕಾರ್ಯದರ್ಶಿ ಉಮಾ ಮಹದೇವನ್ ಕನ್ನಡ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಖಾತ್ರಿಯಾಗಿದೆ. ಇಲಾಖೆಗೆ ಸಂಬಂಧಿಸಿದ ಕಡತಗಳನ್ನು ಇಂಗ್ಲಿಷ್‌ನಲ್ಲಿಯೇ ಬಳಸುವ ಮೂಲಕ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ಸಚಿವೆ ಉಮಾಶ್ರೀ ಹಲವು ಬಾರಿ ಮೌಖಿಕವಾಗಿ ಇಲಾಖೆಯ ಕಾರ್ಯದರ್ಶಿ ಉಮಾ ಮಹದೇವನ್‌ರಿಗೆ ಸೂಚಿಸಿದ್ದಾರೆ.
ಆದರೂ ಅವರು ಕನ್ನಡವನ್ನು ಬಳಸುವುದಕ್ಕೆ ಹಿಂದೇಟು ಹಾಕುತ್ತಿರುವುದರ ಕುರಿತು ದೂರಿನಲ್ಲಿ ದಾಖಲಿಸಿದ್ದಾರೆ. ಆ ಮೂಲಕ ಉಮಾಮಹದೇವನ್ ರಾಜ್ಯಭಾಷಾ ಅಧಿನಿಯಮವನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.





