ಆ.15ಕ್ಕೆ 125 ಇಂದಿರಾ ಕ್ಯಾಂಟಿನ್ ಆರಂಭ: ಕೆ.ಜೆ.ಜಾರ್ಜ್
.jpg)
ಬೆಂಗಳೂರು, ಜು.21: ಮೊದಲ ಹಂತದ ಇಂದಿರಾ ಕ್ಯಾಂಟಿನ್ ಆ.15ರಂದು 125 ವಾರ್ಡ್‌ಗಳಲ್ಲಿ ಆರಂಭಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.15ಕ್ಕೆ 106 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟಿನ್ ಸಿದ್ಧವಾಗಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಒಪ್ಪದ ಮುಖ್ಯಮಂತ್ರಿ ಸಿದ್ದರಾಮಯ್ಯ 125ವಾರ್ಡ್‌ಗಳಲ್ಲಿ ಕಡ್ಡಾಯವಾಗಿ ಕ್ಯಾಂಟಿನ್ ಪ್ರಾರಂಭಿಸಬೇಕು ಎಂದು ಸೂಚಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಒಂದು ಕ್ಯಾಂಟಿನ್‌ಗೆ 900 ಚದರ ಅಡಿ ಜಾಗ ಸಾಕೆಂದು ಅಂದಾಜಿಸಿದ್ದೆವು. ಆದರೆ, 1,500 ಚದರ ಅಡಿ ಜಾಗ ಅಗತ್ಯವಿದೆ. ಕೆಲವು ಕಡೆ ಕಿರಿದಾದ ರಸ್ತೆಗಳಿರುವ ಕಾರಣ ಇಂದಿರಾ ಕ್ಯಾಂಟಿನ್ ನಿರ್ಮಿಸಲು ವಿಳಂಬವಾಗುತ್ತಿದೆ. ಹೀಗಾಗಿ ಅ.2ರಂದು ಉಳಿದ 73 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟಿನ್ ಆರಂಭವಾಗಲಿವೆ ಎಂದು ಅವರು ತಿಳಿಸಿದರು.
ಈ ವೇಳೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಇಂದಿರಾ ಕ್ಯಾಂಟಿನ್ ಯೋಜನೆಯ ಸಂಪೂರ್ಣ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಇದರಲ್ಲಿ ಅವ್ಯವಹಾರ ನಡೆದಿದೆ ಎನ್ನುವುದು ಸುಳ್ಳಿನ ಆರೋಪವಾಗಿದೆ. ಒಂದು ವೇಳೆ ಅವ್ಯವಹಾರ ನಡೆದಿದ್ದರೆ ಆಧಾರ ಸಹಿತವಾಗಿ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.





