ಜನಸಂಖ್ಯೆ ನಿಯಂತ್ರಣಕ್ಕೆ ಅರಿವು ಅಗತ್ಯ: ಎಸ್.ಝಿಯಾವುಲ್ಲಾ

ಮಂಡ್ಯ, ಜು.24: ಜನಸಂಖ್ಯೆ ನಿಯಂತ್ರಣದ ಬಗ್ಗೆ ಜನತೆಗೆ ನಿರಂತರ ಅರಿವು ಮೂಡಿಸುವುದು ಅಗತ್ಯವಿದೆ ಜಿಲ್ಲಾಧಿಕಾರಿ ಎಸ್.ಝೀಯಾವುಲ್ಲಾ ಹೇಳಿದ್ದಾರೆ.
ನಗರದ ಕಲಾಮಂದಿರದಲ್ಲಿ ಸೋಮವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗೃತಿಯಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯವೆಂದರು. ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ. ಆಶಾ ಕಾರ್ಯೆಕರ್ತೆಯರು ಮನೆಮನೆಗಳಿಗೆ ಭೇಟಿ ನೀಡಿ ಜನಸಂಖ್ಯೆ ನಿಯಂತ್ರಣ ಕುರಿತು ಅರಿವು ಮೂಡಿಸಬೇಕು ಎಂದು ಅವರು ಸಲಹೆ ಮಾಡಿದರು.
ಜನಸಂಖ್ಯಾ ಸ್ಫೋಟದಿಂದ ಆಗುವ ದುಷ್ಪಪರಿಣಾಮಗಳ ಬಗ್ಗೆ ಜನತೆಗೆ ತಿಳಿಸುವ ಕೆಲಸವನ್ನು ಆರೋಗ್ಯ ಇಲಾಖೆಯೂ ಮಾಡಬೇಕು. ವೈದ್ಯರು ಮತ್ತು ಸಿಬ್ಬಂದಿಯೂ ಈ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಅವರು ಹೇಳಿದರು.
ವಿಶೇಷ ಉಪನ್ಯಾಸ ನೀಡಿದ ಮಂಡ್ಯ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸಿದ್ಧಲಿಂಗಪ್ಪ, ಇಂದು ವಿಶ್ವದಲ್ಲಿ 700 ಕೋಟಿ ಜನಸಂಖ್ಯೆ ಇದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜನಸಂಖ್ಯೆ ನಿಯಂತ್ರಣ ಅಗತ್ಯವೆಂದರು.
ನಗರಸಭೆ ಅಧ್ಯಕ್ಷ ಎಚ್.ಸಿ.ಬೋರೆಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಹನುಮಂತ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ವಾರ್ತಾರ್ಧಿಕಾರಿ ಹರೀಶ್, ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಕೆ.ಆರ್.ಶಶಿಧರ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ.ಶಶಿಧರ್ ಬಸವರಾಜು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಜನಸಂಖ್ಯಾ ಸ್ಫೋಟದ ನಿಯಂತ್ರಣ ಕುರಿತು ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು ಹಾಗು ನರ್ಸಿಂಗ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.







