ದೇಶವನ್ನು ಕೇಸರಿಮಯ ಮಾಡಲು ಬಿಜೆಪಿ ಯತ್ನ: ಎಚ್.ಡಿ.ದೇವೇಗೌಡ

ಬೆಂಗಳೂರು, ಜು.29: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಇಡೀ ದೇಶವನ್ನು ಕೇಸರಿಮಯ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅದರ ಭಾಗವಾಗಿಯೇ ಬಿಹಾರದಲ್ಲಿ ಆರ್‌ಜೆಡಿ-ಜೆಡಿಯು ಸರಕಾರ ಪತನಗೊಂಡಿದೆ ಎಂದು ಕಿಡಿಗಾರಿದರು.
ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್ ಸಂಜೆ ರಾಜೀನಾಮೆ ನೀಡುತ್ತಾರೆ. ಬೆಳಗ್ಗೆ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಜೊತೆ ಕೈ ಜೋಡಿಸದೆ ಇದ್ದಿದ್ದರೆ ಜೆಡಿಯು 71 ಸ್ಥಾನಗಳನ್ನು ಪಡೆಯಲು ಸಾಧ್ಯವಿತ್ತೆ ಎಂದು ದೇವೇಗೌಡ ಪ್ರಶ್ನಿಸಿದರು.
‘ಮಹಾಘಟಬಂಧನ’ದ ಮೈತ್ರಿ ಸರಕಾರ ಬಿಹಾರದಲ್ಲಿ ಪತನಗೊಂಡ 15 ಗಂಟೆಯೊಳಗೆ ಜೆಡಿಯು ಹಾಗೂ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿದೆ. ಇದು ಕುತಂತ್ರವಲ್ಲದೇ ಮತ್ತೇನು ಎಂದು ಪ್ರಧಾನಿ ನರೇಂದ್ರಮೋದಿ ಹಾಗೂ ಅಮಿತ್ ಶಾ ವಿರುದ್ಧ ಅವರು ವಾಗ್ದಾಳಿ ನಡೆಸಿದರು.
ದೇಶದ ಪ್ರತಿಯೊಬ್ಬರಿಗೂ ಆಹಾರ ಪದ್ಧತಿಯು ಸಂವಿಧಾನಬದ್ಧವಾದ ಹಕ್ಕು. ಅದನ್ನು ಪ್ರಶ್ನಿಸುವ ಅಧಿಕಾರ ಬಿಜೆಪಿಗೆ ಕೊಟ್ಟವರು ಯಾರು?. ಗೋ ಸಂರಕ್ಷಣೆ, ಗೋಹತ್ಯೆ ನಿಷೇಧವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ಬೆಳವಣಿಗೆಗಳನ್ನು ಉದ್ದೇಶಿಸಿ ಬಿಜೆಪಿ ವಿರುದ್ಧ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮಾನ ಅವಕಾಶ ನೀಡಲಾಗಿದೆ. ಬಹುಸಂಸ್ಕೃತಿಗಳನ್ನು ಒಳಗೊಂಡಿರುವ ನಮ್ಮ ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲು ಸಾಧ್ಯವಿಲ್ಲ ಎಂದು ದೇವೇಗೌಡ ಹೇಳಿದರು. ರಾಜ್ಯದ ಹಿತರಕ್ಷಣೆಗೆ ಪ್ರಾದೇಶಿಕ ಪಕ್ಷದ ಅಗತ್ಯವಿದ್ದು, ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕಿದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ಜನ ಬೆಂಬಲ ದೊರೆಯುವುದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವ ಅಗತ್ಯವಿದೆ. ಈ ಸಂಬಂಧ ವಿಧೇಯಕ ನಾನು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಲೋಕಸಭೆಯಲ್ಲಿ ಅಂಗೀಕಾರವಾಗದೆ ಹಾಗೇ ಉಳಿದಿದೆ. ಅದನ್ನು ಆದಷ್ಟು ಬೇಗ ಅಂಗೀಕರಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಒತ್ತಾಯಿಸಲಾಗಿದೆ ಎಂದು ದೇವೇಗೌಡ ಹೇಳಿದರು.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾರಾಯಣಸ್ವಾಮಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಂದಿರುವ ಮಲ್ಲೇಶ್ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಈಗ ಪಕ್ಷ ಕೈಗೊಂಡಿರುವ ನಿರ್ಧಾರಕ್ಕೆ ಬದ್ಧರಾಗಿ ಹಿಂದಕ್ಕೆ ಸರಿದಿದ್ದಾರೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ನಾರಾಯಣರಾವ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಝಫ್ರುಲ್ಲಾಖಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಬೆಂಗಳೂರು ನಗರ ಅಧ್ಯಕ್ಷ ಆರ್.ಪ್ರಕಾಶ್, ಅಲ್ಪಸಂಖ್ಯಾತ ಘಟಕದ ಮುಖಂಡ ಶಫೀವುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







