ಚಿಕ್ಕಬಳ್ಳಾಪುರ: ಕನ್ನಡನಾಡು ರಾಜ್ಯ ರೈತ ಸಂಘದಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ, ಜು.29: ರೈತರ ಸಾಲ ಮನ್ನಾ, ಬಡ್ಡಿ ರಹಿತ ಸಾಲವಿತರಣೆ, ವೈಜ್ಞಾನಿಕ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕನ್ನಡನಾಡು ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟಿಸಿದರು.
ರೈತರ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಕನ್ನಡನಾಡು ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸುವ ಮೂಲಕ ಸರ್ಕಾರಗಳ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಆರ್.ಮುನಿರಾಮೇಗೌಡ, ಸತತ ಬರದಿಂದ ಜಿಲ್ಲೆಯಲ್ಲಿ ರೈತರು ತೀವ್ರ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದು, ಇಂತಹ ದುಸ್ಥಿತಿಯಲ್ಲಿ ರೈತರನ್ನು ಸಮಸ್ಯೆಗಳಿಂದ ಪಾರು ಮಾಡಬೇಕಿರುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರ50 ಸಾವಿರ ರೂಗಳನ್ನು ಮನ್ನಾ ಮಾಡುವ ಬದಲು ಎಲ್ಲ ಬ್ಯಾಂಕ್‌ಗಳಲ್ಲಿನ ಸಾಲ ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಅಲ್ಲದೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನು ಕೇಂದ್ರ ಸರ್ಕಾರ ಸಂಪೂರ್ಣ ಮನ್ನಾ ಮಾಡಬೇಕು. ಜೊತೆಗೆ ರೈತರಿಗೆ ಯಾವುದೇ ಷರತ್ತು ವಿಧಿಸದೆ ಬ್ಯಾಂಕ್‌ಗಳಲ್ಲಿ ಬಡ್ಡಿ ರಹಿತ ಹೊಸ ಸಾಲ ನೀಡಬೇಕು ಎಂದು ಒತ್ತಾಯಿಸಿದ ಅವರು, ರೈತರಿಗೆ ವೃದ್ಧಾಪ್ಯ ವೇತನ ನೀಡಬೇಕು, ರಿಯಾಯಿತಿ ದರದಲ್ಲಿ ರಸಗೊಬ್ಬರ, ಬಿತ್ತನೆ ಬೀಜ, ಕ್ರಿಮಿನಾಶಕ ವಿತರಣೆ ಹಾಗು ಬರಪೀಡಿತ ತಾಲೂಕುಗಳಲ್ಲಿ ಗ್ರಾಪಂ ಗೋಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.
ಸಂಘದ ರಾಜ್ಯ ಉಪಾಧ್ಯಕ್ಷ ಡಿ.ಎನ್.ಅಮರನಾರಾಯಣ, ಪ್ರಧಾನ ಕಾರ್ಯದರ್ಶಿ ಕೆ.ಪಿ. ನಾರಾಯಣಸ್ವಾಮಿ, ಜಿಲ್ಲಾಧ್ಯಕ್ಷ ಮುನಿಸ್ವಾಮಿ, ಕಾರ್ಯದರ್ಶಿ ಸಿ.ವೇಣುಗೋಪಾಲ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಎಸ್.ಟಿ. ಮುದ್ದುಕೃಷ್ಣ ಸೇರಿದಂತೆ ಮತ್ತಿತರು ಇದ್ದರು.







