ಪ್ರಕೃತಿ ವಿಕೋಪ ನಿರ್ವಹಣೆಗೆ ಸಮರ್ಪಕ ಸಿದ್ಧತೆ ಅಗತ್ಯ: ಡಾ. ಕೆ. ಹರೀಶ್ ಕುಮಾರ್

ಚಾಮರಾಜನಗರ, ಜು.31: ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ಎದುರಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಂಡು ಸನ್ನದ್ಧರಾಗಿರಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಕೃತಿ ವಿಕೋಪ ಅಥವ ಮಾನವ ನಿರ್ಮಿತ ವಿಕೋಪವಿರಲಿ ಮುನ್ನೆಚ್ಚರಿಕೆ ಕ್ರಮಗಳು ಅತಿ ಅಗತ್ಯ. ಇದಕ್ಕಾಗಿಯೇ ಜಿಲ್ಲಾಡಳಿತದ ವತಿಯಿಂದ ಪ್ರಕೃತಿ ವಿಕೋಪ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕಾಲಕಾಲಕ್ಕೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಾಗುತ್ತಿದೆ. ವಿಪತ್ತು ನಿರ್ವಹಣಾ ಕೇಂದ್ರಕ್ಕೆ 24*7 ಮಾದರಿಯಲ್ಲಿ ಸಿಬ್ಬಂದಿ ನಿಯೋಜಿಸಿ ಸಮರ್ಪಕವಾಗಿ ಮಾಹಿತಿ ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಅತಿವೃಷ್ಟಿ ಇಲ್ಲವೆ ಅನಾವೃಷ್ಟಿ ಸಂದರ್ಭದಲ್ಲಿ ಹಾನಿ ಸಂಭವಿಸಿದ ಕುರಿತು ವರದಿಗಳು ತ್ವರಿತವಾಗಿ ಬರಬೇಕಿದೆ. ಇದರಿಂದ ಶೀಘ್ರವಾಗಿ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅತ್ಯಂತ ಚುರುಕಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಸಂದರ್ಭಕ್ಕೆ ಅನುಸಾರವಾಗಿ ಸ್ಪಂದಿಸಬೇಕಿದೆ ಎಂದು ಹರೀಶ್ ಕುಮಾರ್ ತಿಳಿಸಿದರು.
ಪ್ರಕೃತಿ ವಿಕೋಪದಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅರಣ್ಯ, ಹೆದ್ದಾರಿ, ವಿದ್ಯುತ್ ಸಂಪರ್ಕ ಸೇರಿದಂತೆ ಇನ್ನಿತರ ಹಲವು ಕ್ಷೇತ್ರಗಳಲ್ಲಿ ತೊಂದರೆಗಳು ಉಂಟಾಗಬಹುದು. ಹೀಗಾಗಿ ನಿರ್ಧಿಷ್ಟ ಇಲಾಖೆಗೆ ಮಾತ್ರ ಪ್ರಕೃತಿ ವಿಕೋಪ ನಿರ್ವಹಣೆ ಸಾಧ್ಯವಾಗುವುದಿಲ್ಲ. ಎಲ್ಲ ಇಲಾಖೆಗಳೂ ಒಂದಿಲ್ಲೊಂದು ಕಾರಣದಿಂದ ಒಟ್ಟಾಗಿ ಪ್ರಕೃತಿ ವಿಕೋಪದಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸಲು ಅಗತ್ಯ ವ್ಯವಸ್ಥೆಗೆ ಸಿದ್ಧರಾಗಲೇಬೇಕಿದೆ ಎಂದರು.
ಪ್ರಸ್ತುತ ಇರುವ ತುರ್ತು ನಿರ್ವಹಣಾ ಕೇಂದ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಗತ್ಯ ಸಲಕರಣೆಗಳು ಬೇಕಿದ್ದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಬೇಕು. ಪೂರ್ಣ ಪ್ರಮಾಣದ ಸಲಕರಣೆ ಪಟ್ಟಿಯನ್ನು ಅಂತಿಮಗೊಳಿಸಿ ಸಲ್ಲಿಸಿದರೆ ಎಲ್ಲ ಅಂಶಗಳನ್ನು ಒಳಗೊಂಡ ಪ್ರಸ್ತಾವನೆವೊಂದನ್ನು ಸಲ್ಲಿಸಬಹುದು. ಇದಕ್ಕಾಗಿ ಅಧಿಕಾರಿಗಳು ಕೂಡಲೇ ಪ್ರತ್ಯೇಕ ಸಭೆ ನಡೆಸಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ, ಪ್ರಕೃತಿ ವಿಕೋಪ ನಿರ್ವಹಣೆಗೆ ಅಗ್ನಿಶಾಮಕ, ಗೃಹರಕ್ಷಕ ದಳ ಇಲಾಖೆಗಳ ಪಾತ್ರವೂ ಸಹ ಅತ್ಯಂತ ಅವಶ್ಯಕವಾಗಿದೆ. ಆರೋಗ್ಯ ಪೂರಕ ಕಾರ್ಯಾಗಾರವನ್ನು ನಡೆಸಿ ಸಿಬ್ಬಂದಿಗೆ ಮಾರ್ಗದರ್ಶನ ಮಾಡಬೇಕಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ಅಗ್ನಿಶಾಮಕ ಅಧಿಕಾರಿ ನವೀನ್, ಗೃಹರಕ್ಷಕ ದಳದ ಜಿಲ್ಲಾ ಸಮಾಧೇಷ್ಠರಾದ ಬಸವರಾಜು, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.







