ಆ.9ರಂದು ರಾಜ್ಯ-ರಾಷ್ಟ್ರೀಯ ಹೆದ್ದಾರಿ ಬಂದ್: ಕುರುಬೂರು ಶಾಂತಕುಮಾರ್
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ
ಬೆಂಗಳೂರು, ಆ.1: ಬರ ನಿರ್ವಹಣೆಗಾಗಿ ಬಡ್ಡಿ ರಹಿತ ಸಾಲ ಹಾಗೂ ಡಾ.ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ಕಿಸಾನ್ ಸಂಘದ ನೇತ್ವದಲ್ಲಿ ಆ.9ರಂದು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗುತ್ತಿದೆ ಎಂದು ರಾಜ್ಯ ರೈತ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಮಂಗಳವಾರ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಗಾಂಧಿ ಭವನದಲ್ಲಿ ರಾಜ್ಯದ ಬರ ನಿರ್ವಹಣೆ ಹಾಗೂ ರೈತರ ಗಂಭೀರ ಸಮಸ್ಯೆಗಳ ಕುರಿತು ಆಯೋಜಿಸಿದ್ದ ರಾಜ್ಯ ಮಟ್ಟದ ಮುಖಂಡರ ಸಭೆಯ ಬಳಿಕ ಅವರು ಮಾತನಾಡಿದರು.
ಇತ್ತೀಚೆಗೆ ಹರ್ಯಾಣದಲ್ಲಿ ದೇಶದ ಪ್ರಮುಖ 153 ರೈತ ಸಂಘಟನೆಗಳ ಸಭೆ ನಡೆಯಿತು. ಈ ಸಭೆಯಲ್ಲಿ ರೈತರ ಭೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆ.9ರಂದು ರಾಷ್ಟ್ರೀಯ ಹೆದ್ದಾರಿಗಳ ಬಂದ್ ನಡೆಸಲು ಸೂಚಿಸಲಾಗಿದೆ. ಆ ಪ್ರಕಾರವಾಗಿ ರಾಜ್ಯದಲ್ಲಿ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಮಾಡಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದಲೂ ಬರ ತಾಂಡವವಾಡುತ್ತಿದೆ. ಆದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಬರಪರಿಹಾರ ನೀಡುವಲ್ಲಿ ಮೀನಾಮೇಷ ಎಣಿಸುತ್ತಿವೆ. ಹೀಗಾಗಿ ನಬಾರ್ಡ್ ಯೋಜನೆಯಡಿ ಬರ ನಿರ್ವಹಣೆಗಾಗಿ ರೈತ ಕುಟುಂಬಕ್ಕೆ ಬಡ್ಡಿ ರಹಿತ ಸಾಲವನ್ನು ಕೊಡಬೇಕು ಎಂದು ಅವರು ಒತ್ತಾಯಿಸಿದರು.
ಪ್ರಧಾನಿ ನರೇಂದ್ರ ಮೋದಿ ಕಳೆದ ಬಾರಿಯ ಚುನಾವಣೆಯ ಭಾಷಣದಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕೂಡಲೇ ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡುವುದಾಗಿ ಹೇಳಿದ್ದರು. ಆದರೆ, ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದಿದ್ದರೂ ಈ ಬಗ್ಗೆ ಕಿಂಚಿತ್ತೂ ಚಿಂತಿಸುತ್ತಿಲ್ಲ. ಹೀಗಾಗಿ ಕೂಡಲೆ ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡಬೇಕೆಂದು ಅವರು ಆಗ್ರಹಿಸಿದರು.
ಇತ್ತೀಚಿಗೆ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾಗಿದ್ದು, ಕೆಆರ್‌ಎಸ್, ಕಬಿನಿ, ತುಂಗಭದ್ರ ಅಣೆಕಟ್ಟು ತುಂಬುತ್ತಿದೆ. ಆದರೆ, ಜಲಾಶಯಗಳ ನೀರನ್ನು ನಮ್ಮ ರೈತರ ಜಮೀನುಗಳಿಗೆ ಹರಿಸುವುದನ್ನು ಬಿಟ್ಟು, ತಮಿಳುನಾಡಿಗೆ ಬಿಡಲಾಗುತ್ತಿದೆ. ಇದರಿಂದ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಅಂತರ್ಜಲ ತೀವ್ರ ಕುಸಿತಕಂಡಿದೆ. ಈ ಬಗ್ಗೆ ರಾಜ್ಯ ಸರಕಾರ ಕೂಲಂಕಶವಾಗಿ ಅಧ್ಯಯನ ನಡೆಸಿ, ಕೂಡಲೆ ರಾಜ್ಯದ ರೈತರ ಜಮೀನುಗಳಿಗೆ ನೀರು ಹರಿಸಬೇಕು ಎಂದು ಅವರು ಹೇಳಿದರು.







