ಸ್ವಾತಂತ್ರ್ಯ ದಿನಾಚರಣೆ: ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧಾರ

ಮಡಿಕೇರಿ, ಆ.1: ಜಿಲ್ಲಾಡಳಿತ ವತಿಯಿಂದ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿ ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿಯು ಸಹ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು. ಹಾಗೆಯೇ ಎಲ್ಲರೂ ತೊಡಗಿಸಿಕೊಂಡು ಸ್ವಾತಂತ್ರ್ಯ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಸ್ವಾತಂತ್ರ್ಯ ದಿನಾಚರಣೆ ಇಡೀ ದೇಶದ ಎಲ್ಲರ ಸಂಭ್ರಮ ಆಚರಣೆಯಾಗಿದ್ದು, ಸ್ವಯಂ ಪ್ರೇರಣೆಯಿಂದ ಎಲ್ಲರೂ ಭಾಗವಹಿಸಬೇಕು. ಆಗಸ್ಟ್, 15 ರಂದು ಬೆಳಗ್ಗೆ ನಗರದ ಕೋಟೆ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು, ಹಾಜರಾತಿಯಲ್ಲಿ ತಪ್ಪದೆ ಸಹಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಸಾದ್ಯವಾದಷ್ಟು ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಆಗಸ್ಟ್ 14 ಮತ್ತು 15 ರಂದು ದೀಪಾಲಂಕಾರ ಮಾಡಬೇಕು. ಪ್ಲಾಸ್ಟಿಕ್‌ನಿಂದ ತಯಾರಿಸಿದ ಧ್ವಜ ಹಾಗೂ ಹೂಗುಚ್ಚ ಬಳಸದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸಲಹೆ ಮಾಡಿದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ಮಕ್ಕಳಿಗೆ ಅಂದು ಬೆಳಗ್ಗೆ ಉಪಹಾರ ವ್ಯವಸ್ಥೆ ಮಾಡುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಯಿತು. ಜಿಲ್ಲಾಡಳಿತದಿಂದ ಎಸ್.ಎಸ್.ಎಲ್.ಸಿ, ಮತ್ತು ಪಿ.ಯು.ಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾಗುವ ತಂಡಗಳಿಗೆ ಪ್ರಶಸ್ತಿ ನೀಡುವ ವ್ಯವಸ್ಥೆಯಾಗಬೇಕು. ಹಾಗೆಯೇ ಸ್ವಚ್ಚ ಭಾರತ್ ಅಭಿಯಾನದಲ್ಲಿ ಶ್ರಮಿಸಿದವರನ್ನು ಗೌರವಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉತ್ತಮ ರೀತಿಯಲ್ಲಿ ಆಚರಿಸಲು ಸ್ವಾಗತ, ವೇದಿಕೆ, ಧ್ವಜಾರೋಹಣ, ಕವಾಯತು, ಸಾಂಸ್ಕೃತಿಕ, ಹಣಕಾಸು, ಆಹಾರ ಮತ್ತಿತರ ಉಪ ಸಮಿತಿಗಳು ಕಳೆದ ಬಾರಿಯಂತೆ ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಉಪ ಸಮಿತಿಗಳ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸದಸ್ಯರನ್ನೊಳಗೊಂಡಂತೆ ಸಭೆ ನಡೆಸಿ ತಾವು ತೆಗೆದುಕೊಂಡ ತೀರ್ಮಾನವನ್ನು ಶೀಘ್ರ ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ನಗರದಲ್ಲಿರುವ ಮಹಾತ್ಮಾ ಗಾಂಧೀಜಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ಕೆ.ಎಸ್.ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ಮಂಗೇರಿರ ಮುತ್ತಣ್ಣ ಮತ್ತು ಕುವೆಂಪು ಅವರ ಪುತ್ಥಳಿ ಸುತ್ತ ಸ್ವಚ್ಚತಾ ಕಾರ್ಯಕೈಗೊಂಡು, ಮಹನೀಯರ ಪುತ್ಥಳಿಗಳಿಗೆ ಹೂವಿನಹಾರ ಮತ್ತು ದೀಪದ ಅಲಂಕಾರ ಮಾಡಲು ಕ್ರಮವಹಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ತಿಳಿಸಿದರು. ಆ.15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಇಡೀ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಬೇಕು ಎಂದ ಅವರು, ಈ ಬಾರಿಯೂ ಸಹ ಸಾಂಸ್ಕೃತಿಕ ಕಾರ್ಯಕ್ರಮ ಗುಣಮಟ್ಟ ಕಾಯ್ದುಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಾಂಸ್ಕೃತಿಕ ಉಪ ಸಮಿತಿಗೆ ಸಲಹೆ ನೀಡಿದರು.
ಸ್ವಾತಂತ್ರ್ಯೋತ್ಸವ ಅಂಗವಾಗಿ ಕಾವೇರಿ ಕಲಾಕ್ಷೇತ್ರದಲ್ಲಿ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ನಂಜುಂಡೇಗೌಡ, ಜಿ.ಪಂ.ಮುಖ್ಯಲೆಕ್ಕಾಧಿಕಾರಿ ನಂದ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ.ಸದಾಶಿವಪ್ಪ, ಪೌರಾಯುಕ್ತರಾದ ಬಿ.ಶುಭಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಭಾಗ್ಯಲಕ್ಷ್ಮಿ, ಪೊಲೀಸ್ ಇನ್ಸ್‌ಪೆಕ್ಟರ್ ಐ.ಪಿ.ಮೇದಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಗೀತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀಬಾಯಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಟೇಶ್, ಗೃಹ ರಕ್ಷಕದಳದ ಅಧಿಕಾರಿ ಚಂದನ್, ಜಿ.ಪಂ.ಎಂಜಿನಿಯರ್ ಮಂಜುನಾಥ್, ಕಾರ್ಮಿಕ ಇಲಾಖೆ ಅಧಿಕಾರಿ ರಾಮಚಂದ್ರ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ರವೀಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ದಮಯಂತಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬೆಳ್ಯಪ್ಪ, ಜಿಲ್ಲಾಧಿಕಾರಿಯವರ ಕಚೇರಿಯ ಶಿರಸ್ತೆದಾರರಾದ ಪ್ರಕಾಶ್, ಅರುಣ್ ಸಾಗರ್, ಅನಿಲ್ ಕುಮಾರ್, ನಾನಾ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದು ಹಲವು ಸಲಹೆ ನೀಡಿದರು.







