ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಗದ್ಯಾಳ ಕರೆ

ಗದಗ, ಆ.2: ಆ.15 ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಾಂಸ್ಕೃತಿಕ ಸಮಿತಿ ಸಭೆ ಹಾಗೂ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ, ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗವುದು ಎಂದು ಅಪರ ಜಿಲ್ಲಾಧಿಕಾರಿ ಐ.ಜೆ. ಗದ್ಯಾಳ ಅವರು ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ಸನ್ಮಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಅವರು ಮಾತನಾಡಿ, ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಧ್ವಜಾರೋಹಣ ನಂತರ 4 ರಿಂದ 5 ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವುದು. ಅದೇ ದಿನ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಗರದ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಜರುಗಲಿದೆ. ಈ ಸಮಾರಂಭದಲ್ಲಿ ಸಂಗೊಳ್ಳಿ ರಾಯಣ್ಣ ಕುರಿತು ನಾಟಕ, ದೇಶಭಕ್ತಿ ಗೀತೆಗಳು, ಕೋಲಾಟ, ಜಾನಪದ ಕಾರ್ಯಕ್ರಮಗಳು, ವಿವಿಧ ನೃತ್ಯ ಕಾರ್ಯಕ್ರಮಗಳು ಜರುಗಲಿದೆ ಎಂದರು.
ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದವರಿಗೆ ಸನ್ಮಾನಿಸಲಾಗುವುದು ಎಂದ ಅವರು ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಕಾರ್ಯಕ್ರಮ ನಿರೂಪಣೆ, ಆಮಂತ್ರಣ ಪತ್ರಿಕೆ, ವೇದಿಕೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ತಹಶೀಲ್ದಾರ ಶಿವಕುಮಾರ, ಆಹಾರ ಇಲಾಖೆಯ ಉಪನಿರ್ದೇಶಕ ಅಶೋಕ ಕಲಘಟಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ. ರುದ್ರಪ್ಪ, ಜಂಟಿ ಕೃಷಿ ನಿರ್ದೇಶಕ ಬಾಲರೆಡ್ಡಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ. ವಿಶ್ವನಾಥ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ಇತರರು ಇದ್ದರು.







