ದ.ಕ ಜಿಲ್ಲೆಯಲ್ಲಿ ಗುಪ್ತಚರ ವಿಭಾಗದ ಬಲವರ್ಧನೆಗೆ ಕ್ರಮ: ನಸೀರ್ ಅಹ್ಮದ್ ಸೂಚನೆ

ಮಂಗಳೂರು, ಆ. 5: ಪೊಲೀಸರು ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕು, ಜಿಲ್ಲೆಯಲ್ಲಿ ಪೊಲೀಸ್ ಗುಪ್ತಚರ ವಿಭಾಗ ವನ್ನು ಬಲಪಡಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗುವುದು ಎಂದು ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್ ಅಹ್ಮದ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ದೇಶದಲ್ಲಿಯೇ ಶೈಕ್ಷಣಿಕವಾಗಿ ಮುಂದುವರಿದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಲ್ಲಿ ಕೋಮು ಸೌರ್ಹಾದತೆಗೆ ಧಕ್ಕೆಯಾಗುವ ವಾತಾವರಣ ಸೃಷ್ಟಿಯಾಗಿರುವುದು ಆಯೋಗದ ಗಮನಕ್ಕೆ ಬಂದಿದೆ. ಜಿಲ್ಲೆಯಲ್ಲಿ ಈ ರೀತಿಯ ವಾತಾವರಣ ನಿರ್ಮಿಸಲು ಕಾರಣವಾಗಿರುವ ಶಕ್ತಿಗಳನ್ನು ನಿಯಂತ್ರಿಸಲು ಪೊಲೀಸರು ಮುಂಚಿತವಾಗಿಯೇ ದುಷ್ಕರ್ಮಿಗಳನ್ನು ಗುರುತಿಸಿ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಪ್ತಚರ ಇಲಾಖೆಯ ಕಾರ್ಯ ನಿರ್ವಹಣೆ ದುರ್ಬಲವಾಗಿದೆ. ದುಷ್ಕರ್ಮಿಗಳು ದುಷ್ಕೃತ್ಯ ನಡೆಸಲು ಸಾಮಾಜಿಕ ಜಾಲ ತಾಣಗಳನ್ನು ಬಳಸಿಕೊಳ್ಳುತ್ತಿರುವುದು, ಇತರ ತಂತ್ರಗಳನ್ನು ನಡೆಸುತ್ತಿರುವುದನ್ನು ಪತ್ತೆ ಹಚ್ಚಬೇಕಾಗಿದೆ. ದ.ಕ ಜಿಲ್ಲೆಯಲ್ಲಿ ಈ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಪೊಲೀಸರು ಯಾವೂದೇ ಪಕ್ಷದ ಪರವಾಗಿ ಕಾರ್ಯನಿರ್ವಹಿಸದೆ ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಮುಖ್ಯ ಮಂತ್ರಿಯ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ನಸೀರ್ ಅಹ್ಮದ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೌರ್ಹಾದ ಜಾಥ :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಥವಾ ಅಲ್ಪ ಸಂಖ್ಯಾತರ ಆಯೋಗದ ಮೂಲಕ ಎಲ್ಲಾ ಜಾತಿ, ಧರ್ಮ, ಸಂಘ ಸಂಸ್ಥೆಗಳ ಜೊತೆ ಸೇರಿ ಸೌರ್ಹಾದ ಜಾಥವನ್ನು ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ಇದೆ ಎಂದು ನಸೀರ್ ಅಹ್ಮದ್ ತಿಳಿಸಿದ್ದಾರೆ.
ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲದ ಪ್ರಮಾಣ ಹೆಚ್ಚಳ:- ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸರಕಾರವೇ ಶುಲ್ಕವನ್ನು ಹೆಚ್ಚಿಸಿರುವ ಕಾರಣ ಬ್ಯಾಂಕ್‌ಗಳು ಸಾಲದ ಪ್ರಮಾಣವನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ. ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7,600 ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣ ಕಲಿಕೆಗಾಗಿ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ 83 ಕೋಟಿ ರೂ. ಸಾಲ ಪಡೆದಿದ್ದಾರೆ ಎಂದು ನಸೀರ್ ಅಹ್ಮದ್ ತಿಳಿಸಿದರು.
ಶಾದಿ ಭಾಗ್ಯ 400 ಜನರಿಗೆ :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾದಿ ಭಾಗ್ಯ ಯೋಜನೆಯಡಿ ಅರ್ಜಿ ಸಲ್ಲಿಸಿರುವವರ ಪೈಕಿ 400 ಜನರಿಗೆ ಸೌಲಭ್ಯ ಮಂಜೂರು ಮಾಡಲಾಗಿದೆ. ಇನ್ನೂ ಒಂದು ಸಾವಿರ ಜನರಿಗೆ ಮಂಜೂರಾತಿಗೆ ಬಾಕಿ ಉಳಿದಿದೆ ಎಂದು ನಸೀರ್ ಅಹ್ಮದ್ ತಿಳಿಸಿದ್ದಾರೆ.
ಸುದ್ದಿಗೊಷ್ಠಿಯಲ್ಲಿ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಅಲ್ಪ ಸಂಖ್ಯಾತರ ಆಯೋಗದ ಸದಸ್ಯ ಮುಹಮ್ಮದ್ ಪಟೇಲ್, ರಫೀಕ್ ಭಂಡಾರಿ, ಬಲಜೀತ್ ಸಿಂಗ್, ಮೆಟಿಲ್ಡಾಡಿ ಸೋಜ, ಆಯೋಗದ ಕಾರ್ಯದರ್ಶಿ ಅನೀಸ್ ಸಿರಾಜ್ ಮೊದಲಾದವರು ಉಪಸ್ಥಿತರಿದ್ದರು.







