ಸಾಲು ಸಾಲು ರಜೆ: ಕೆಎಸ್ಸಾರ್ಟಿಸಿಯಿಂದ ವಿಶೇಷ ಸಾರಿಗೆ ವ್ಯವಸ್ಥೆ

ಬೆಂಗಳೂರು, ಆ. 9: ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾರ್ವತ್ರಿಕ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಆ.11ರಿಂದ 12ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲಾ, ತಾಲೂಕು ಕೇಂದ್ರಗಳಿಗೆ ಕೆಎಸ್ಸಾರ್ಟಿಸಿಯಿಂದ 500 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ತಮಿಳುನಾಡು-ಆಂಧ್ರ ಕಡೆಗೆ ಮಧುರೈ, ಕುಂಬಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್, ತಿರುಪತಿ, ವಿಜಯವಾಡ, ಹೈದ್ರಾಬಾದ್ ಸೇರಿ ಇನ್ನಿತರ ಸ್ಥಳಗಳಿಗೆ ಶಾಂತಿನಗರದ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ.
ವಿಜಯನಗರ, ಜೆ.ಪಿ.ನಗರ, ಜಯನಗರ 4ನೆ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ 18ನೆ ಅಡ್ಡರಸ್ತೆ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಇ-ಟಿಕೇಟ್ ಬುಕ್ಕಿಂಗ್‌ನ್ನು www.ksrtc.in ವೆಬ್‌ಸೈಟ್ ಮುಖಾಂತರ ಮಾಡಬಹುದು. ಸಾರ್ವಜನಿಕ ಪ್ರಯಾಣಿಕರು ಬೆಂಗಳೂರು ನಗರದಲ್ಲಿರುವ 171, ಮೈಸೂರು ನಗರದಲ್ಲಿರುವ 17 ಹಾಗೂ ಮಂಗಳೂರಿನಲ್ಲಿರುವ 35 ಹಾಗೂ ರಾಜ್ಯದ ಇತರೆ ಸ್ಥಳಗಳಲ್ಲಿರುವ 230 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.
ಆ.15ರಂದು ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಿಂದ ಬೆಂಗಳೂರಿಗೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆ ವ್ಯವಸ್ಥ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.







