ಕನ್ನಡ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ದಂಡನೆಗೆ ಶಿಫಾರಸ್ಸು: ಪ್ರೊ.ಎಸ್.ಜಿ.ಸಿದ್ದರಾಮಯ್ಯ
ಕನ್ನಡ ನಾಮಫಲಕ ಅಳವಡಿಸಲು ತಿಂಗಳ ಗಡುವು

ಬೆಂಗಳೂರು, ಅ. 9: ತಿಂಗಳೊಳಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳು ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದಂಡನೆ ಶಿಫಾರಸ್ಸು ಮಾಡುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿನ ಅಂಗಡಿ ಮುಂಗಟ್ಟುಗಳು ಕಡ್ಡಾಯವಾಗಿ ನಾಮಫಲಕವನ್ನು ಕನ್ನಡದಲ್ಲಿ ಪ್ರದರ್ಶಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದರು.
ನಗರ ಜಿಲ್ಲೆಗೆ ಬರುವ ಪುರಸಭೆ ವ್ಯಾಪ್ತಿಯಲ್ಲಿನ ಅಂಗಡಿ ಮುಂಗಟ್ಟುಗಳ ನಾಮಫಲಕ ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು. ಈ ಕೆಲಸ ಆಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ದಂಡನೆಗೆ ಸರಕಾರಶಿಫಾರಸ್ಸು ಮಾಡುತ್ತೇನೆ ಎಂದು ಹೇಳಿದರು.
ಕನ್ನಡದಲ್ಲಿ ನಾಮಫಲಕವನ್ನು ಹಾಕದ ಅಂಗಡಿಗಳ ಪರವಾನಿಗೆಯನ್ನು ರದ್ದು ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಕನ್ನಡ ನಾಮ ಫಲಕ ಅಳವಡಿಸಲು ಹಿಂದೇಟು ಹಾಕುವ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು.
ಖಾಸಗಿ ಶಾಲೆಗಳ ಪರವಾನಿಗೆ ರದ್ದತಿ: ನಗರದ ಸಿಬಿಎಸ್ಸಿ ಐಸಿಎಸ್ಸಿ ಪಠ್ಯ ಕ್ರಮಗಳನ್ನು ಅಳವಡಿಸಿಕೊಂಡಿರುವ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಡ್ಡಾಯವಾಗಿ ಬಳಸಿಕೊಳ್ಳದ ಶಿಕ್ಷಣ ಸಂಸ್ಥೆಗಳ ಪರವಾನಗಿಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಲ್ಲಿನ ಕಡತಗಳಲ್ಲಿ ಆಂಗ್ಲಭಾಷೆಯಲ್ಲಿ ಟಿಪ್ಪಣಿ ಬರೆದಿರುವುದನ್ನು ಖಂಡಿಸಿದ ಅವರು, ಮುಂದೆ ಇದೇ ಪರಿಸ್ಥಿತಿ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವಿ.ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಕಾಂತರಾಜು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕವಿ ಸಿದ್ದಲಿಂಗಯ್ಯ, ಗಿರೀಶ್ ಪಟೇಲ್, ನರಸಿಂಹಮೂರ್ತಿ, ಮಹಂತೇಶ್ ಪಟೇಲ್, ಪ್ರಕಾಶ್ ಜೈನ್, ಕಾರ್ಯದರ್ಶಿ ಮುರುಳೀಧರ್ ಸೇರಿದಂತೆ ಇತರರು ಇದ್ದರು.







