ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆಗೆ ಚಾಲನೆ

ಉಡುಪಿ, ಆ.10: ಜಂತುಹುಳುಗಳು ಮಕ್ಕಳ ಬೆಳವಣಿಗೆಗೆ ಕಂಟಕಪ್ರಾಯ ವಾಗಿದ್ದು, ಜಂತುಹುಳುಗಳನ್ನು ನಾಶಪಡಿಸುವುದರಿಂದ ಮಕ್ಕಳು ಆರೋಗ್ಯಕರ ವಾಗಿ ಬೆಳೆಯಲು ಸಾಧ್ಯ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ ಗುರುವಾರ ಅಜ್ಜರ ಕಾಡು ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಜಂತುಹುಳು ನಾಶ ಪಡಿಸುವ ಆಲ್ಬೆಂಡರೆಲ್ ಮಾತ್ರೆಗಳನ್ನು ಮಕ್ಕಳಿಗೆ ವಿತರಿಸಿ ಅವರು ಮಾತನಾಡುತ್ತಿದ್ದರು.
ದೇಶದ ಭವಿಷ್ಯವಾಗಿರುವ ಮಕ್ಕಳು ಆರೋಗ್ಯವಂತರಾಗಿದ್ದರೆ ದೇಶವೂ ಆರೋಗ್ಯಕರವಾಗಿರಲು ಸಾಧ್ಯ. ಸ್ವಂತ ಹಾಗೂ ದೇಶದ ಹಿತಾಸಕ್ತಿಗಿಂತ ಮಕ್ಕಳ ಆರೋಗ್ಯ ಬಹಳ ಮುಖ್ಯ. ಜಂತುಹುಳುಗಳ ಬಾಧೆಯಿಂದ ಮಕ್ಕಳಲ್ಲಿ ಅಪೌಷ್ಠಿಕತೆ ಹಾಗೂ ರಕ್ತಹೀನತೆ ಉಂಟಾಗಿ ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳಣಿಗೆ ಕುಠಿತವಾಗುತ್ತದೆ ಎಂದರು.
ಶಾಲೆಯನ್ನು ಕೇಂದ್ರವನ್ನಾಗಿಟ್ಟುಕೊಂಡು ಮಕ್ಕಳ ಆರೋಗ್ಯ ಸುಧಾರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅದೇ ರೀತಿ ಶಾಲೆಯಿಂದ ಹೊರ ಗುಳಿದ ಮಕ್ಕಳ ಆರೋಗ್ಯದ ಬಗ್ಗೆಯೂ ಹೆಚ್ಚಿನ ಗಮನ ನೀಡಬೇಕಾಗಿದೆ. ಶಾಲೆಯಿಂದ ಹೊರಗೆ ಇರುವ ಮಕ್ಕಳು ಜಂತುಹುಳು ಮಾತ್ರೆಯಿಂದ ವಂಚಿತರಾಗದಂತೆ ತಡೆಯಲು ಆಶಾ ಕಾರ್ಯಕತೆಯರು ಹೆಚ್ಚಿನ ನಿಗಾ ವಹಿಸ ಬೇಕು ಎಂದು ಸಚಿವರು ತಿಳಿಸಿದರು.
ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಉಪಾಧ್ಯ ಉಪಸ್ಥಿತರಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು.
2.43ಲಕ್ಷ ಮಕ್ಕಳಿಗೆ ಮಾತ್ರೆ ವಿತರಣೆ
ಉಡುಪಿ ಜಿಲ್ಲೆಯಲ್ಲಿ 1ರಿಂದ 19 ವರ್ಷದೊಳಗಿನ ಒಟ್ಟು 2.43ಲಕ್ಷ ಮಕ್ಕಳಿಗೆ ಜಂತುಹುಳು ಮಾತ್ರೆ ವಿತರಿಸುವ ಗುರಿಯನ್ನು ಹೊಂದಲಾಗಿದ್ದು, ಬಿಟ್ಟುಹೋದ ಮಕ್ಕಳಿಗಾಗಿ ಆ.17ರಂದು ಮಾತ್ರೆ ನೀಡಲಾಗುವುದು. ಎರಡು ವರ್ಷದೊಳಗಿನ ಮಕ್ಕಳಿಗೆ ಅರ್ಧ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಪೂರ್ತಿ ಮಾತ್ರೆಯನ್ನು ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರು ಭಾಗವಹಿಸ ಲಿರುವುರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ತಿಳಿಸಿದರು.







