ಚೆಕ್ ಅಮಾನ್ಯ ಪ್ರಕರಣ: ಆರೋಪಿ ಸೆರೆ
ಪುತ್ತೂರು, ಆ. 10: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯೋರ್ವರನ್ನು ಗುರುವಾರ ಪುತ್ತೂರು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರು ತಾಲೂಕಿನ ಕೆದಿಲ ಗಾಂಧಿನಗರ ನಿವಾಸಿ ಮುಹಮ್ಮದ್(48) ಬಂಧಿತ ಆರೋಪಿ.
ಬಂಟ್ವಾಳ ತಾಲೂಕಿನ ಫರಂಗಿಪೇಟೆ ನಿವಾಸಿ ಅಬ್ದುಲ್ ಖಾದರ್ ಎಂಬವರಿಗೆ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಮುಹಮ್ಮದ್ ಚೆಕ್ ನೀಡಿದ್ದು, ಈ ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ ಅಬ್ದುಲ್ ಖಾದರ್ ಬಂಟ್ವಾಳ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಪ್ರಕರಣದ ತನಿಖೆಗೆ ಮುಹಮ್ಮದ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆತನ ಪತ್ತೆಗಾಗಿ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಗುರುವಾರ ಪುತ್ತೂರು ನಗರ ಠಾಣಾ ಸಿಬ್ಬಂದಿ ಪರಮೇಶ್ವರ ಹಾಗು ಜಯರಾಮ ಕೆದಿಲದಿಂದ ಆರೋಪಿಯನ್ನು ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Next Story





