‘ಶೀಘ್ರ ತಂಬಾಕು ನಿಷೇಧ ಉನ್ನತ ಅನುಷ್ಠಾನ ಜಿಲ್ಲೆಯಾಗಿ ಉಡುಪಿ’
ಉಡುಪಿ, ಆ.11: ಜಿಲ್ಲೆಯಲ್ಲಿ ತಂಬಾಕು ನಿಷೇದದ ಕುರಿತು ಕೈಗೊಂಡಿರುವ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದ್ದು, ಉಡುಪಿಯನ್ನು ಉನ್ನತ ಅನುಷ್ಠಾನ ಜಿಲ್ಲೆಯನ್ನಾಗಿ ಶೀಘ್ರದಲ್ಲಿ ಘೋಷಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಬೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣದ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ಅರಿವು ಮೂಡಿಸಲಾಗಿದೆ. ವಿವಿಧೆಡೆ ದಾಳಿ ನಡೆಸಿ ಸಂಬಂದಪಟ್ಟವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಎಲ್ಲೆಡೆ ನಿಷೇಧ ಫಲಕಗಳನ್ನು ಅಳವಡಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಿರುವ ರಾಜ್ಯ ತಂಬಾಕು ನಿಯಂತ್ರಣಾ ಕೋಶ, ಜಿಲ್ಲೆಯನ್ನು ಉನ್ನತ ಅನುಷ್ಠಾನ ಜಿಲ್ಲೆಯನ್ನಾಗಿ ಘೋಷಿಸಲು ನಿರ್ಧರಿಸಿದ್ದು, ಶೀಘ್ರದಲ್ಲಿ ಈ ಘೋಷಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪ್ರತಿ ತಿಂಗಳ ಮೊದಲ ಶನಿವಾರ ತಂಬಾಕು ವಿರೋಧಿ ದಿನವನ್ನಾಗಿ ಅಚರಿಸಿ, ವಿವಿಧ ಚಟುವಟಿಕೆಗಳನ್ನು ಕೈ ಗೊಳ್ಳುವಂತೆ ಹಾಗೂ ಈ ಕುರಿತು ವರದಿ ನೀಡುವಂತೆ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಲ್ಲಿ ಎ.17ರಿಂದ ತಂಬಾಕು ನಿಯಂತ್ರಣ ದಳ ಮತ್ತು ಪೊಲೀಸ್ ಇಲಾಖೆಯಿಂದ ಒಟ್ಟು 622 ಪ್ರಕರಣ ದಾಖಲಿಸಿದ್ದು. 96,160 ರೂ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ರಾಜ್ಯ ತಂಬಾಕು ನಿಯಂತ್ರಣಾ ಕೋಶದ ಪ್ರಭಾಕರ್, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.







