ಲಿಂಗಾಯತರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲು ಆಗ್ರಹ
ಬೆಂಗಳೂರು, ಆ.14: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಲಿಂಗಾಯತ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕು ಎಂದು ಅಖಿಲ ಕರ್ನಾಟಕ ಲಿಂಗಾಯತ ರಕ್ಷಣಾ ವೇದಿಕೆ ಆಗ್ರಹಿಸಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಮಾಗಡಿ ಶಿವಶಂಕರ್, ರಾಜ್ಯದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಲಿಂಗಾಯತ ಸಮುದಾಯದಲ್ಲಿ ವೀರೇಂದ್ರ ಪಾಟೀಲ್ ನಂತರ ಇದುವರೆಗೂ ಯಾರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಗುರುತಿಸಿಲ್ಲ. ನಮ್ಮ ಸಮುದಾಯದ ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಹೀಗಾಗಿ, ನಮ್ಮ ಸಮುದಾಯದ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಮಾಡಬೇಕು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅನಗತ್ಯವಾಗಿ ಲಿಂಗಾಯತ ಧರ್ಮ ಪ್ರತ್ಯೇಕ ಮಾಡಲಾಗುತ್ತದೆ ಎಂದು ಸಮುದಾಯವನ್ನು ವಿಂಗಡನೆ ಮಾಡಲು ಮುಂದಾಗಿದ್ದಾರೆ. ಆದರೆ, ವಾಸ್ತವವಾಗಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಸಿಗುವುದಿಲ್ಲ. ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಎನ್‌ಡಿಎ ಸರಕಾರ ಹಿಂದೂ ಧರ್ಮವನ್ನು ಯಾವುದೇ ಕಾರಣಕ್ಕೂ ವಿಂಗಡನೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಪಾದಿಸಿದರು.
ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಸೇರಿದವರು ಮುಖ್ಯಮಂತ್ರಿಯಾಗಿಲ್ಲ. ಹೀಗಾಗಿ, ನಮ್ಮ ಸಮುದಾಯದವರಿಗೆ ಆದ್ಯತೆ ನೀಡಬೇಕು. ಚುನಾವಣೆಗೂ ಮೊದಲೇ ಘೋಷಣೆ ಮಾಡಬೇಕು. ಇಲ್ಲದಿದ್ದರೆ ದಿಲ್ಲಿಯಲ್ಲಿರುವ ಕಾಂಗ್ರೆಸ್ ಭವನದ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಹಾಗೂ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.







