ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವು ಪ್ರಕರಣ: 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ಬೆಂಗಳೂರು, ಆ.17: ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಅಸಹಜವಾಗಿ ಸಾವನ್ನಪ್ಪಿರುವ ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ನೀಡುವ ಜೊತೆಗೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಎಸ್‌ಎಫ್‌ಐ ಹಾಗೂ ಪೋಷಕರ ಸಂಘಟನೆಗಳು ಆಗ್ರಹಿಸಿವೆ.
ಗುರುವಾರ ನಗರದ ನೃಪತುಂಗ ರಸ್ತೆಯಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಎದುರು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ), ಸರ್ವಶಿಕ್ಷಣ ಅಭಿಯಾನ ಜಾಗೃತ ಪೋಷಕರ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವು ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಎಫ್‌ಐ ಕೇಂದ್ರ ಸಮಿತಿ ಸದಸ್ಯ ಬಸವರಾಜ ಪೂಜಾರ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಹತ್ತನೆ ತರಗತಿ ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವು ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಹಾಗೂ ನ್ಯಾಯ ಒದಗಿಸಬೇಕು. ಅದೇ ರೀತಿ, ಕಾವ್ಯಾ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಮನವಿ ಮಾಡಿದರು.
ಆಳ್ವಾಸ್ ಸಂಸ್ಥೆಯ ಪರವಾಗಿ ಕೆಲವು ಹೋರಾಟ ನಡೆಸಲು ಮುಂದಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಒಂದೊಮ್ಮೆ ಕಾವ್ಯಾ ನಿಮ್ಮ ಮಗಳಾಗಿದ್ದರೆ ನೀವು ಈ ಸಂಸ್ಥೆಯ ಪರವಾಗಿ ಮಾತನಾಡುತ್ತಿದ್ದಿರಾ, ಈ ಪ್ರಕರಣದಲ್ಲಿ ನ್ಯಾಯ ಬೇಕೆಂದು ವಿದ್ಯಾರ್ಥಿಗಳು ಮಾತ್ರವಲ್ಲದೆ ಪ್ರತಿಯೊಬ್ಬರು ಒತ್ತಾಯಿಸುತ್ತಿದ್ದಾರೆ ಎಂದರು.
ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದ ಹೆಸರಿನಲ್ಲಿ ವ್ಯಾಪಾರ ಮಾಡಲು ಮುಂದಾಗುತ್ತಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಊಟ ನೀಡದೆ ಶಿಸ್ತಿನ ಹೆಸರಿನಲ್ಲಿ ಶಿಕ್ಷಿಸಲಾಗುತ್ತಿದೆ. ಅಲ್ಲದೆ, ಈ ಶಿಕ್ಷಣ ಸಂಸ್ಥೆಯಲ್ಲಿ 26 ಸಾವಿರ ವಿದ್ಯಾರ್ಥಿಗಳಿದ್ದಾರೆ ಎಂದು ಹೇಳಲಾಗಿದೆ. ಇಷ್ಟೊಂದು ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಇಲಾಖೆಯಲ್ಲಿ ಅವಕಾಶವಿದೆಯೇ ಎಂದು ಪ್ರಶ್ನಿಸಿದರು.
ಶಿಕ್ಷಣ ಕಾಯ್ದೆಯನ್ನು ಉಲ್ಲಂಘಿಸುತ್ತಿರುವ ಖಾಸಗಿ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ಅದೇ ರೀತಿ, ಅಕ್ರಮ ಖಾಸಗಿ ವಸತಿ ಶಾಲೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗುರುರಾಜ ದೇಸಾಯಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪೋಷಕರ ಸಂಘಟನೆ ಅಧ್ಯಕ್ಷ ನರಸಿಂಹ ಮೂರ್ತಿ, ಭಾರತಿ, ಜಿ.ಶ್ರೀನಿವಾಸ್, ನವೀ್ಕುಮಾರ್ ಸೇರಿ ಪ್ರಮುಖರಿದ್ದರು.







