ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ: ಡಾ.ಪರಮೇಶ್ವರ್
‘ಗೆಲ್ಲುವ ಸಾಮರ್ಥ್ಯ ಇರುವವರಿಗೆ ಟಿಕೆಟ್’

ಬೆಂಗಳೂರು, ಆ. 18: ಏಳು ಮಂದಿ ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ಹಸಿರು ನಿಶಾನೆ ತೋರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಝಮೀರ್ ಅಹ್ಮದ್, ಇಕ್ಬಾಲ್ ಅನ್ಸಾರಿ, ಎಚ್.ಸಿ.ಬಾಲಕೃಷ್ಣ, ಎನ್. ಚೆಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಭೀಮಾನಾಯ್ಕಾ, ಅಖಂಡ ಶ್ರೀನಿವಾಸಮೂರ್ತಿ ಸೇರಿ 7 ಮಂದಿಯೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು.
ಮೇಲ್ಕಂಡ ಏಳು ಮಂದಿ ಕಾಂಗ್ರೆಸ್ ಸೇರ್ಪಡೆ ಸಂಬಂಧ ತಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಸುತ್ತಿನ ಮಾತುಕತೆ ನಡೆಸಿದ್ದವು. ಇದೀಗ ಅದಕ್ಕೆ ಹೈಕಮಾಂಡ್ ಸಮ್ಮತಿದೆ ಎಂದ ಅವರು, ಯಾವುದೇ ಷರತ್ತಿಲ್ಲದೆ ಏಳು ಮಂದಿಯೂ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದರು.
ಏಳು ಮಂದಿಗೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಂಬಂಧ ಇನ್ನೂ ಯಾವುದೇ ಚರ್ಚೆ ಮಾಡಿಲ್ಲ. ಆದರೆ, ಗೆಲ್ಲುವ ಸಾಮರ್ಥ್ಯ ಇರುವವರಿಗೆ ಟಿಕೆಟ್ ನೀಡಬೇಕಾಗುತ್ತದೆ ಎಂದ ಅವರು, ಟಿಕೆಟ್ ಬಗ್ಗೆ ಚರ್ಚೆ ಮಾಡಲು ಇನ್ನೂ ಬಹಳ ಸಮಯವಿದೆ ಎಂದರು.
ಗೆಲುವು ನಮ್ಮದೆ:
‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ರಾಜ್ಯದ ಜನರೂ ಕಾಂಗ್ರೆಸ್ ಪಕ್ಷಕ್ಕೆ ನಿಶ್ಚಿತವಾಗಿಯೂ ಆಶೀರ್ವಾದ ಮಾಡಲಿದ್ದಾರೆ’
-ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ







