ರಮ್ಯಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಖಂಡನೆ
ಮಂಡ್ಯ, ಆ.24: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಟ್ವೀಟ್‍ಗೆ ಸಂಬಂಧಿಸಿದಂತೆ ಮಾಜಿ ಸಂಸದೆ ರಮ್ಯಾ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದನ್ನು ಮಂಡ್ಯ ಲೋಕಸಭಾ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಎಂ. ಎಸ್. ಚಿದಂಬರ್ ಖಂಡಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ. ಇದನ್ನು ಅರಿಯದೆ ಕೆಲವು ಬಿಜೆಪಿ ಕಾರ್ಯಕರ್ತರು ಪ್ರಚಾರಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಟೀಕಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನಮ್ಮ ದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದ್ದು, ಸಾವಿರಾರು ಜನರು ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದಾರೆ. ಈ ಬಗ್ಗೆ ಗಮನಹರಿಸದ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯದ ಬರ ಸಮಸ್ಯೆ ಬಗ್ಗೆ ಪ್ರಧಾನಿ ಗಮನ ಸೆಳೆಯಲು ರಾಜ್ಯ ಬಿಜೆಪಿ ಕೇಂದ್ರ ಸಚಿವರು, ನಾಯಕರು, ಮುಖಂಡರು ವಿಫಲರಾಗಿದ್ದಾರೆ ಎಂದು ಅವರು ತರಾಟೆಗೆ ತೆಗೆದುಕೊಂಡರು.
ಬಿಜೆಪಿ ಕಾರ್ಯಕರ್ತರು ಕೇವಲ ಪ್ರಚಾರಕ್ಕಾಗಿ ಹೇಳಿಕೆ, ಪ್ರತಿಭಟನೆ ಮಾಡುವುದನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಲಿ. ಇದೇ ರೀತಿ ಕಾಂಗ್ರೆಸ್ ನಾಯಕರ ವಿರುದ್ಧ ಸಲ್ಲದ ಆರೋಪ ಮಾಡುತ್ತಿದ್ದರೆ ಪ್ರತಿಯಾಗಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ನಗರಸಭೆ ಸದಸ್ಯ ಮಹೇಶ್, ಯುವ ಮುಖಂಡರಾದ ಸತೀಶ್‍ಚಂದ್ರ, ಉಮೇಶ್ ಸಂಪಹಳ್ಳಿ, ಸಿದ್ದೇಗೌಡ ಪಣಕನಹಳ್ಳಿ ಉಪಸ್ಥಿತರಿದ್ದರು.







