ಮಂಗಳೂರು: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಪಾದಯಾತ್ರೆ
ಮಂಗಳೂರು, ಆ.28: ಕೇಂದ್ರ ಸರಕಾರವು ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇದರ ವಿರುದ್ಧ ಸಿಪಿಎಂ ಮಂಗಳೂರು ನಗರ ದಕ್ಷಿಣ ವತಿಯಿಂದ ಮಂಗಳೂರು ನಗರಾದ್ಯಂತ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆಗೆ ಇಂದು ಬೆಳಗ್ಗೆ ಚಾಲನೆ ದೊರೆಯಿತು.
ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಕಾರ್ಯಕ್ರಮದಲ್ಲಿ ಪಾದಯಾತ್ರೆಗೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯ ಬಾಲಕೃಷ್ಣ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭ ಪಕ್ಷದ ಮುಖಂಡರಾದ ವಸಂತ ಆಚಾರಿ, ಸುನೀಲ್ ಕುಮಾರ್ ಬಜಾಲ್, ವಾಸುದೇವ ಉಚ್ಚಿಲ್, ಜಯಂತಿ ಬಿ. ಶೆಟ್ಟಿ, ಸುರೇಶ್ ಬಜಾಲ್, ಭಾರತಿ ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
ದೇಶಾದ್ಯಂತ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಹೆಚ್ಚಳ, ರೈತರ ಸಾಲಮನ್ನಾ ಮಾಡಲು ಮೀನಾಮೇಷ ಎಣಿಸುತ್ತಿರುವ ಕೇಂದ್ರ ಸರಕಾರ, ನಿರುದ್ಯೋಗ ಪ್ರಮಾಣದಲ್ಲಿ ಹೆಚ್ಚಳ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ನೀಡಲು ಕ್ರಮ ಕೈಗೊಳ್ಳದಿರುವುದು, ಖಾಸಗೀಕರಣದ ಹಾವಳಿ ತಡೆಯುವಲ್ಲಿ ವಿಫಲತೆ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಹಾಗೂ ಹೊರೆಯಾಗುತ್ತಿರುವ ಜಿ.ಎಸ್.ಟಿ. ಇತ್ಯಾದಿ ಕೇಂದ್ರ ಸರಕಾರದ ಜನವಿರೋಧಿ ನೀತಿಗಳಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿಯು ಈ ಪಾದಯಾತ್ರೆ ಹಮ್ಮಿಕೊಂಡಿದೆ.