ಮಹಿಳಾ ಟೆಕ್ಕಿಗೆ ಚಾಕು ಇರಿದು ದುಷ್ಕರ್ಮಿ ಪರಾರಿ
ಬೆಂಗಳೂರು, ಆ.31: ಮಹಿಳಾ ಟೆಕ್ಕಿಯೊಬ್ಬರಿಗೆ ಕಿರುಕುಳ ನೀಡಿ ನಂತರ ಚಾಕುವಿನಿಂದ ಇರಿದು ದುಷ್ಕರ್ಮಿಯೊಬ್ಬ ಪರಾರಿಯಾಗಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಬೇಗೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿರುವ ಮಹಿಳೆ ಗುರುವಾರ ಬೆಳಗ್ಗೆ ಕೂಡ್ಲು ಗೇಟ್‌ನ ಸಿಗ್ನಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬಂದ ದುಷ್ಕರ್ಮಿಯೊಬ್ಬ ಅವರ ಕೈ ಹಿಡಿದಿದ್ದಾನೆ. ಇದಕ್ಕೆ ಪ್ರತಿರೋಧ ತೋರಿ ರಕ್ಷಣೆಗೆ ಕೂಗಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೂಗಿಕೊಂಡ ಕಾರಣ ಆಕ್ರೋಶಗೊಂಡ ದುಷ್ಕರ್ಮಿ ಅವರ ಎಡಗೈಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದು, ಗಾಯಗೊಂಡಿದ್ದ ಮಹಿಳೆಯನ್ನು ಸ್ಥಳೀಯರು ಮಂಗಮ್ಮನ ಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಬೇಗೂರು ಪೊಲೀಸರು ಪ್ರಕರಣ ದಾಖಲಿಸಿ ಪರಾರಿಯಾಗಿರುವ ದುಷ್ಕರ್ಮಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
Next Story





