ಗುಡ್ಡೆ ಮನೆ ಅಪ್ಪಯ್ಯ ಗೌಡರ ಸ್ಮಾರಕದ ಆವರಣಕ್ಕೆ ಹಾನಿ: ಶಾಸಕರು ಅಸಮಾಧಾನ

ಮಡಿಕೇರಿ, ಸೆ.1: ನಗರದಲ್ಲಿರುವ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಕಂಚಿನ ಪ್ರತಿಮೆಯ ಆವರಣದ ಬೇಲಿಯನ್ನು ಕಿತ್ತು ಹಾಕಿ ಸ್ವಾತಂತ್ರ್ಯ ಹೋರಾಟಗಾರನಿಗೆ ಅಪಮಾನ ಮಾಡಲು ಯತ್ನಿಸಿದ ಪ್ರಕರಣವನ್ನು ಜಿಲ್ಲೆಯ ಶಾಸಕರು ತೀವ್ರವಾಗಿ ಖಂಡಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹೋರಾಟಗಾರರ ಪ್ರತಿಮೆಗಳನ್ನು ಸಂರಕ್ಷಿಸಬೇಕೆಂದು ಒತ್ತಾಯಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ಗುಡ್ಡೆಮನೆ ಅಪ್ಪಯ್ಯ ಗೌಡರು ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ದೇಶಕ್ಕಾಗಿ ತ್ಯಾಗ ಮಾಡಿದ ಮಹಾವೀರ ಸೇನಾನಿಗಳು, ಈ ಮಹಾ ಸೇನಾನಿಗಳ ಪ್ರತಿಮೆ ಸಂರಕ್ಷಿಸುವುದು ಎಲ್ಲರ ಹೊಣೆಯಾಗಿದೆ. ಗುಡ್ಡೆಮನೆ ಅಪ್ಪಯ್ಯ ಅವರ ಸ್ಮಾರಕದ ಸುತ್ತಲೂ ಹಾಕಲಾದ ಸರಪಳಿ ಕಂಭಗಳನ್ನು ಹಾಗೂ ಗೇಟಿಗೆ ಹಾಕಲಾದ ಬೀಗ ಹಾನಿಯಾಗಿದ್ದು, ತಕ್ಷಣ ದುರಸ್ತಿ ಪಡಿಸಬೇಕೆಂದು ಹೇಳಿದರು.
ನಗರಸಭೆ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಗುಡ್ಡೆ ಮನೆ ಅಪ್ಪಯ್ಯಗೌಡ ಪ್ರತಿಮೆ ಸುತ್ತಮುತ್ತ ಸ್ವಚ್ಛಗೊಳಿಸುವ ಕಾರ್ಯವಾಗಬೇಕು ಮತ್ತು ಸುರಕ್ಷತೆ ಬಗ್ಗೆ ಗಮನ ಹರಿಸಬೇಕೆಂದು ತಿಳಿಸಿದರು.
ಶಾಸಕ ಅಪ್ಪಚ್ಚು ರಂಜನ್ ಅವರು ಮಾತನಾಡಿ, ನಗರದಲ್ಲಿರುವ ವೀರ ಸೇನಾನಿಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳನ್ನು ಸಂರಕ್ಷಣೆ ಮಾಡುವತ್ತ ಹೆಚ್ಚಿನ ಗಮನಹರಿಸಬೇಕಿದೆ. ಸ್ಮಾರಕ ಸುತ್ತ ಯಾವುದೇ ರೀತಿ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದರು.
ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ ಮಾತನಾಡಿ, ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದಡಿ 5 ಲಕ್ಷ ರೂ ವನ್ನು ಈಗಾಗಲೇ ಪೊಲೀಸ್ ಇಲಾಖೆಗೆ ಬಿಡುಗಡೆ ಮಾಡಲಾಗಿದ್ದು, ನಗರದ ಎಲ್ಲಾ ಕಡೆಗಳಲ್ಲೂ ಸಿಸಿಟಿವಿ ಅಳವಡಿಸಬೇಕಿದೆ ಎಂದು ಸಲಹೆ ನೀಡಿದರು.
ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ ದಸರಾದ ಒಳಗಾಗಿ ಎರಡು ಪ್ರತಿಮೆಗಳ ಆವರಣವನ್ನು ದುರಸ್ತಿಪಡಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎ.ಹರೀಶ್ ಮತ್ತಿತರ ಪ್ರಮುಖರು ಹಾಜರಿದ್ದರು.







