ಗಾಝಿಯಾಬಾದ್: ಬಿಜೆಪಿ ನಾಯಕನ ಗುಂಡಿಟ್ಟು ಹತ್ಯೆ

ಗಾಝಿಯಾಬಾದ್, ಸೆ.2: ಗಾಝಿಯಾಬಾದ್‌ನ ಖೋರಾ ಕಾಲನಿಯಲ್ಲಿ ಶನಿವಾರ ಮಧ್ಯಾಹ್ನ ಬಿಜೆಪಿ ನಾಯಕನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿದ್ದಾರೆ. ಘಟನೆಯಲ್ಲಿ ಅವರ ಗೆಳೆಯ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ನಾಯಕ ಗಜೇಂದ್ರ ಭಾಟಿ ಹಾಗೂ ಅವರ ಗೆಳೆಯ ಬಲ್ಬೀರ್ ಸಿಂಗ್ ಚೌಹಾಣ್ ಖೋರಾ ಕಾಲನಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದರು ಎಂದು ನಗರ ಪೊಲೀಸ್ ಅಧೀಕ್ಷಕ ಅರುಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಇಬ್ಬರನ್ನೂ ಸಮೀಪದ ನೊಯ್ಡಾದ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ, ಗಂಭೀರ ಗಾಯಗೊಂಡಿದ್ದ ಗಂಜೇದ್ರ ಭಾಟಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದ್ಜಾರೆ. ಬಲ್ಬೀರ್ ಸಿಂಗ್ ಅವರು ಕೂಡ ಗಂಭೀರ ಗಾಯಗೊಂಡಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಭಾಟಿಯ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆಗೆ ಆಗಮಿಸಿದರು. ಅನಪೇಕ್ಷಿತ ಘಟನೆಗಳನ್ನು ತಡೆಯುವ ಉದ್ದೇಶದಿಂದ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು ಎಂದು ಸಿಂಗ್ ಹೇಳಿದ್ದಾರೆ.





