ರೊಹಿಂಗ್ಯ ಮುಸ್ಲಿಮರ ಗಡೀಪಾರು ಪ್ರಕರಣ: ಕೇಂದ್ರದಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಸೆ.4: ರೊಹಿಂಗ್ಯ ಮುಸ್ಲಿಮರನ್ನು ಮ್ಯಾನ್ಮಾರ್‌ಗೆ ಗಡೀಪಾರು ಮಾಡಿದ ಪ್ರಕರಣದ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ಸಾವಿರಾರು ರೊಹಿಂಗ್ಯ ಮುಸ್ಲಿಮರನ್ನು ಗಡೀಪಾರು ಮಾಡಲು ಗೃಹ ಸಚಿವಾಲಯ ನಿರ್ಧರಿಸಿರುವುದನ್ನು ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಸರಕಾರದ ನಿರ್ಧಾರ ಅಂತರಾಷ್ಟ್ರೀಯ ಮಾನವಹಕ್ಕು ಒಪ್ಪಂದವನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ಈ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.
ಭಾರತದಲ್ಲಿ ನೆಲೆನಿಂತಿರುವ ರೊಹಿಂಗ್ಯ ಮುಸ್ಲಿಮರನ್ನು ಗಡೀಪಾರು ಮಾಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗದು ಎಂದು ಕೇಂದ್ರ ಸರಕಾರದ ವಕೀಲರು ವಿಚಾರಣೆ ವೇಳೆ ನ್ಯಾಯಾಲಯಕ್ಕೆ ತಿಳಿಸಿದರು.
ಮ್ಯಾನ್ಮಾರ್‌ನಲ್ಲಿ ಅಸಹಾಯಕ ಸ್ಥಿತಿಯಲ್ಲಿರುವ ರೊಹಿಂಗ್ಯ ಮುಸ್ಲಿಮರ ವಿರುದ್ಧ ಅಲ್ಲಿನ ಸೇನೆ ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸುತ್ತಿರುವ ವೀಡಿಯೊ ದೃಶ್ಯಾವಳಿ ಕಳೆದ ವಾರ ಪ್ರಸಾರವಾದ ಬಳಿಕ ವಿಶ್ವದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.







