ಗೌರಿ ಲಂಕೇಶ್ ಹತ್ಯೆ ಖಂಡಿಸಿ ಎಸ್‍ಡಿಪಿಐಯಿಂದ ಪ್ರತಿಭಟನೆ

ಮಡಿಕೇರಿ, ಸೆ.6: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಕೋಮುವಾದಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕೊಲೆಗಾರರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು.
ಎಸ್‍ಡಿಪಿಐ ಜಿಲ್ಲಾಧ್ಯಕ್ಷರಾದ ಅಮಿನ್ ಮೊಹಿಸಿನ್ ಮಾತನಾಡಿ, ಕೋಮುವಾದಿಗಳು ಪತ್ರಿಕಾ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದ್ದು, ರಾಜ್ಯ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪ್ರಗತಿಪರ ಚಿಂತಕರಿಗೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುವ ಪತ್ರಕರ್ತರಿಗೆ ಅಗತ್ಯ ರಕ್ಷಣೆಯನ್ನು ನೀಡಬೇಕೆಂದು ಒತ್ತಾಯಿಸಿದರು.
ಗೌರಿಲಂಕೇಶ್ ಅವರ ಹತ್ಯೆ ಅತ್ಯಂತ ಹೇಯ ಕೃತ್ಯವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ತಲೆ ತಗ್ಗಿಸುವಂತ್ತಾಗಿದೆ. ತಕ್ಷಣ ಕೊಲೆಗಟುಕರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿ ಪಡಿಸಬೇಕೆಂದು ಅಮಿನ್ ಮೊಹಿಸಿನ್ ಒತ್ತಾಯಿಸಿದರು. ಸಾಹಿತಿ ಕಲುಬುರ್ಗಿ ಅವರ ಹತ್ಯೆ ಆರೋಪಿಗಳನ್ನು ಎರಡು ವರ್ಷ ಕಳೆದರೂ ಪತ್ತೆ ಹಚ್ಚದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರುಗಳಾದ ಮನ್ಸೂರ್, ಕೆ.ಜೆ.ಪೀಟರ್, ಎಸ್‍ಡಿಪಿಐ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕರ್ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.







