ತಂಬಾಕು ಬಳಕೆ ವಿರುದ್ಧ ಜಾಗೃತಿ ಅಗತ್ಯ : ಎಸ್‍ಪಿ ರಾಜೇಂದ್ರ ಪ್ರಸಾದ್

ಮಡಿಕೇರಿ, ಸೆ.13 :ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಇನ್ನಷ್ಟು ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಸಲಹೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತಂಬಾಕು ನಿಯಂತ್ರಣ ಜಿಲ್ಲಾ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ಆರೋಗ್ಯದ ಬಗ್ಗೆ ನಮಗೆ ಗಮನ ಹರಿಸುವುದು ಗೊತ್ತಿದೆ ಎಂದು ಕೆಲವರು ಹೇಳಬಹುದು. ಆದರೂ ಸಹ ಸಾರ್ವಜನಿಕರ ಆರೋಗ್ಯ ಬಗ್ಗೆ ಕಾಳಜಿ ವಹಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಿರುಚಿತ್ರವನ್ನು ಪ್ರದರ್ಶನ ಮಾಡುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು.’
ತಂಬಾಕು ಸೇವನೆಯಿಂದ ಕ್ಯಾನ್ಸರ್ ಮತ್ತಿತರ ರೋಗಗಳು ಬರುವುದರಿಂದ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಕೊಡಗು ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಯಂತ್ರಣ (ಕೋಪ್ಟಾ) ಕಾಯ್ದೆಯನ್ನು ಉಲ್ಲಂಘಿಸಿದರೆ 200 ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸುಮಾರು 2079 ಪ್ರಕರಣಗಳು ದಾಖಲಾಗಿದ್ದು, ಸುಮಾರು 2.31 ಲಕ್ಷ ರೂ. ದಂಡ ಸಂಗ್ರಹವಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಮಾತನಾಡಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧ ನಾಮಫಲಕಗಳನ್ನು ಅಳವಡಿಸಬೇಕು. ಮಕ್ಕಳು ಧೂಮಪಾನ ಚಟಕ್ಕೆ ದಾಸರಾಗದಂತೆ ಮನವರಿಕೆ ಮಾಡಬೇಕು. ಸ್ಥಳೀಯ ಸಂಸ್ಥೆಗಳು ಪರವಾನಗಿ ನವೀಕರಿಸುವ ಸಂದರ್ಭದಲ್ಲಿ ಕೋಪ್ಟಾ ಕಾಯ್ದೆಯನ್ನು ಕಡ್ಡಾಯವಾಗಿ ಪಾಲಿಸಲು ನಿರ್ದೇಶನ ನೀಡಬೇಕು ಎಂದು ಅವರು ಸೂಚನೆ ನೀಡಿದರು.
ಹಾಗೆಯೇ ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ಇರುವ ಹೆದ್ದಾರಿ ಫಲಕಗಳಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ವಿನೈಲ್‍ಗಳನ್ನು ಅಳವಡಿಸಲು ಕ್ರಮಕೈಗೊಳ್ಳುವಂತೆ ವಾರ್ತಾಧಿಕಾರಿ ಅವರಿಗೆ ಸಲಹೆ ಮಾಡಿದರು.
ಕೋಪ್ಟಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪಿಡಿಓಗಳು ಸಹ ಕೈಜೋಡಿಸಬೇಕು ಎಂದು ನಿರ್ದೇಶನ ನೀಡಿದರು.
ರಾಜ್ಯ ತಂಬಾಕು ನಿಯಂತ್ರಣ ಘಟಕದ ಸಲಹೆಗಾರರಾದ ಪ್ರಭಾಕರ್ ಅವರು ಮಾಹಿತಿ ನೀಡಿ ಕೊಡಗನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಎಲ್ಲಾ ರೀತಿಯ ಪ್ರಯತ್ನಗಳು ನಡೆದಿವೆ. ಅದಕ್ಕಾಗಿ ನಾನಾ ಇಲಾಖೆ ಅಧಿಕಾರಿಗಳು ಕೈಜೋಡಿಸಬೇಕಿದೆ ಎಂದು ಅವರು ಕೋರಿದರು.
ಪ್ರಾಥಮಿಕ ಶಾಲೆಯಿಂದ ವೈದ್ಯಕೀಯ ಕಾಲೇಜಿನವರೆಗೆ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಆದ್ದರಿಂದ ಈ ಬಗ್ಗೆ ಗಮನ ಹರಿಸಬೇಕಿದೆ ಎಂದರು.
ತಂಬಾಕು ನಿಯಂತ್ರಣ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಮಸ್ಯೆಗಳಿದ್ದಲ್ಲಿ ಸ್ಥಳೀಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಭಾಕರ್ ಅವರು ಮನವಿ ಮಾಡಿದರು.
ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರಾದ ಡಾ.ಹನುಮಂತರಾಯಪ್ಪ ಅವರು ಪ್ರತೀ ಮಾಹೆಯ ಮೊದಲ ಶನಿವಾರ ಶಾಲೆಗಳಲ್ಲಿ ತಂಬಾಕು ವಿರೋಧಿ ದಿನಾಚರಣೆಯನ್ನು ಆಚರಣೆ ಮಾಡಬೇಕು ಎಂದು ಕೋರಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ್, ವೈದ್ಯಕೀಯ ಕಾಲೇಜಿನ ಉಪನ್ಯಾಸಕರಾದ ಡಾ.ರಾಮಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮಮ್ತಾಜ್, ತಾ.ಪಂ.ಇಓಗಳಾದ ಪೆಡ್ನೇಕರ್, ಜೀವನ್ ಕುಮಾರ್, ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಮೃತ್ಯುಂಜಯ, ಜಿಲ್ಲಾ ಸರ್ವೇಕ್ಷಣಾ ಘಟಕದ ಸಾಂಕ್ರಾಮಿಕ ರೋಗಗಳ ತಜ್ಞರಾದ ಮಂಜುನಾಥ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್.ಜಯಪ್ಪ ಇತರರು ಹಾಜರಿದ್ದರು.







