9ನೆ ದಿನಕ್ಕೆ ಕಾಲಿರಿಸಿದ ವಿಧಾನಪರಿಷತ್ ಸದಸ್ಯರ ಧರಣಿ
ಶಿಕ್ಷಣ ಕ್ಷೇತ್ರದ ಬೇಡಿಕೆಗಳ ಈಡೇರಿಕೆಗೆ ಒತ್ತಾಯ
ಬೆಂಗಳೂರು, ಸೆ.14: ಶಿಕ್ಷಣ ಕ್ಷೇತ್ರ, ಶಿಕ್ಷಕರು, ಪಿಯು ಉಪನ್ಯಾಸಕರು, ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಕ್ಷಾತೀತವಾಗಿ ವಿಧಾನಪರಿಷತ್ ಸದಸ್ಯರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ನಡೆಸುತ್ತಿರುವ ಅಹೋರಾತ್ರಿ ಧರಣಿಯು 9ನೆ ದಿನಕ್ಕೆ ಕಾಲಿರಿಸಿದೆ.
ಶಿಕ್ಷಣ ಕ್ಷೇತ್ರದ ಬೇಡಿಕೆಗಳ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.15ರಂದು ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿರುವ ಧರಣಿ ನಿರತ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ರಾಜ್ಯಾದ್ಯಂತ ಶಾಲಾ, ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ವಿಧಾನಪರಿಷತ್ ಸದಸ್ಯರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಪ್ರತಿಭಟನಾ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ತಿನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ತೋರಿಕೆಗೆ ಮಾತ್ರ ಉತ್ತರ ನೀಡುತ್ತಿದ್ದಾರೆ. ಆದರೆ, ಇದುವರೆಗೂ ಯಾವುದೇ ಸಮಸ್ಯೆಗಳನ್ನು ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಪ್ರತಿಭಟನೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸೇರಿದಂತೆ ಎಲ್ಲಾ ನಾಯಕರು ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಸದಸ್ಯರಾದ ಪುಟ್ಟಣ್ಣ, ರಮೇಶ್‌ಬಾಬು, ಕೆ.ಟಿ.ಶ್ರೀಕಂಠೇಗೌಡ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಅರುಣ್ ಶಹಪೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







