ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ
ಬೆಂಗಳೂರು, ಸೆ. 16: ಡಿವೈಎಸ್ಪಿಗಣಪತಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಸಚಿವ ಕೆ.ಜೆ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿದರು.
ನಗರದ ಮೌರ್ಯವೃತ್ತದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಡಿವೈಎಸ್ಪಿಗಣಪತಿ ಪ್ರಕರಣದಲ್ಲಿ ಸಿಐಡಿ ನಿಷ್ಪಕ್ಷಪಾತವಾದ ತನಿಖೆ ನಡೆಸಿಲ್ಲ. ಸಿಬಿಐನಿಂದ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದ್ದರೂ ಸಚಿವ ಜಾರ್ಜ್ ರಾಜೀನಾಮೆ ನೀಡದೆ ಕುರ್ಚಿಗೆ ಅಂಟಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ಸಚಿವ ಜಾರ್ಜ್ ಅವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಸೆ. 26 ರಿಂದ ಅಹೋರಾತ್ರಿ ಧರಣಿ ಕೈಗೆತ್ತಿಕೊಳ್ಳಲಾಗುವುದು ಎಂದು ಗುಡುಗಿದರು.
ರಾಜ್ಯಸರಕಾರದ ಭ್ರಷ್ಟಾಚಾರ ಹಗರಣಗಳ ಬಗ್ಗೆ ಸದ್ಯದಲ್ಲೇ ದಾಖಾಲೆಗಳನ್ನು ಬಿಡುಗಡೆ ಮಾಡಲಾಗುವುದು. ಅಲ್ಲಿಯವರೆಗೂ ಕಾಂಗ್ರೆಸ್ ನಾಯಕರು ಬಹಿರಂಗ ಚರ್ಚೆಯ ಬಗ್ಗೆ ಮಾತನಾಡದೇ ವೌನ ವಹಿಸಿದರೆ ಒಳ್ಳೆಯದು ಎಂದು ಯಡಿಯೂರಪ್ಪ ಹೇಳಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ನಡೆಯುತ್ತಿರುವ ಕೇರಳದಿಂದ ಬಂದವರು ಅವರ ಬಗ್ಗೆ ನಮಗೆ ಗೊತ್ತಿದೆ. ದಾಖಲೆ ಬಿಡುಗಡೆ ಮಾಡುವವರೆಗೂ ಕಾಯಲಿ. ರಾಜ್ಯ ಸರಕಾರದ ಭ್ರಷ್ಟಾಚಾರ ಹಗರಣಗಳನ್ನು ಬಯಲಿಗೆಳೆಯಲಾಗುವುದು ಎಂದರು.
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ. ಜಾರ್ಜ್ ಇಬ್ಬರು ಕಾಂಗ್ರೆಸ್ ಹೈಕಮಾಂಡ್‌ನ ಎಟಿಎಂ ಇದ್ದಂತೆ. ಇವರಿಂದ ಹೈಕಮಾಂಡ್‌ಗೆ ಹಣ ರವಾನೆಯಾಗುತ್ತದೆ ಎಂದು ಆರೋಪಿಸಿದರು.
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪ್ರಾಮಾಣಿಕ ಅಧಿಕಾರಿಗಳಿಗೆ ಹಿಂಸೆ ನೀಡಲಾಗುತ್ತಿದೆ ಎಂದು ದೂರಿದರು.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಧರಣಿಯಲ್ಲಿ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಸಂಸದರಾದ ಪಿ.ಸಿ.ಮೋಹನ್, ಪ್ರತಾಪ್ ಸಿಂಹ ಸೇರಿದಂತೆ ಇತರರು ಇದ್ದರು.







