ವಿದ್ಯಾರ್ಥಿ ಸಹಾಯಧನ ವಿತರಣೆ, ಅಭಿನಂದನಾ ಸಮಾರಂಭ

ಉಡುಪಿ, ಸೆ.17: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ವಿದ್ಯಾರ್ಥಿ ಸಹಾಯಧನ ವಿತರಣೆ ಹಾಗೂ ಅಭಿನಂದನಾ ಸಮಾರಂಭವನ್ನು ಉಡುಪಿಯ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನ ದಲ್ಲಿ ರವಿವಾರ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಸೊಸೈಟಿಯಲ್ಲಿ ಸುಮಾರು 33 ವರ್ಷಗಳ ಕಾಲ ಸೇವೆ ಸಲ್ಲಿಸಿ ಸಹಾಯಕ ಪ್ರಧಾನ ವ್ಯವಸ್ಥಾಪಕರಾಗಿ ಸ್ವಯಂ ನಿವೃತ್ತಿ ಹೊಂದಿದ ರಾಬಿನ್ಸನ್ ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಮತ್ತು ಸದಾನಂದ ಕಾಂಚನ್ ಅವರನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸನ್ಮಾನಿಸಿದರು.
ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಸದಸ್ಯರ 52 ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಅನಾರೋಗ್ಯ ಪೀಡಿತರ ಚಿಕಿ್ಸೆಗೆ ಆರ್ಥಿಕ ನೆರವು ನೀಡಲಾಯಿತು.
ಮಂಗಳಮುಖಿಯರಿಗೆ ಗೃಹ ನಿರ್ಮಾಣಕ್ಕಾಗಿ, ಉಡುಪಿ ಕಡೆಕಾರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ಕಲ್ಪಿಸಲು, ಮಂಚಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾವಾಹನ ಖರೀದಿಸಲು, ಉಡುಪಿ ಪೊಲೀಸ್ ಇಲಾಖೆಯ ಮೂಕಾಂಬಿಕಾ ಭಜನಾ ಮಂದಿರದ ಜೀರ್ಣೋದ್ಧಾರ ಸಮಿತಿಗೆ 50,000ರೂ. ಆರ್ಥಿಕ ಸಹಾಯ ನೀಡಲಾಯಿತು.
ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಸಂಘದ ಆಡಳಿತ ಮಂಡಳಿ ಸದಸ್ಯರಾದ ಪುರುಷೋತ್ತಮ ಶೆಟ್ಟಿ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಸಂತ ಕಾಮತ್, ವಿನಯ ಕುಮಾರ್, ಜಯಾನಂದ ಮೈಂದನ್, ಪದ್ಮನಾಭ ನಾಯಕ್, ಜಯ ಶೆಟ್ಟಿ, ಗಾಯತ್ರಿ ಭಟ್ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ವಹಿಸಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ವಾರ್ಷಿಕ ವರದಿಯನ್ನು ಮತ್ತು ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು. ಈ ವರ್ಷ ಶೇ.15 ಡಿವಿಡೆಂಡ್ ಘೋಷಿಸ ಲಾಯಿತು. ಸಂಘದ ಉಪಾಧ್ಯಕ್ಷ ಎಲ್.ಉಮಾನಾಥ್ ವಂದಿಸಿದರು.







