ಕೆಪಿಸಿಸಿ ಸಭೆಯಲ್ಲಿ ಖಮರುಲ್ಗೆ ಶ್ರದ್ಧಾಂಜಲಿ ಸಲ್ಲಿಕೆ

ಖಮರುಲ್ ಇಸ್ಲಾಮ್
ಬೆಂಗಳೂರು, ಸೆ.18: ಎಐಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಖಮರುಲ್ ಇಸ್ಲಾಮ್ ನಿಧನಕ್ಕೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದ ಸಭೆಯನ್ನು ಮೊಟಕುಗೊಳಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮ ಆಯೋಜಿಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಸೆ.23ರಂದು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ ಕಾಂಗ್ರೆಸ್ ಸಮಾವೇಶ ನಡೆಸುವ ಕುರಿತು ಪೂರ್ವಭಾವಿಯಾಗಿ ಚರ್ಚೆ ನಡೆಸಲಾಗಿತ್ತು.
ಅಲ್ಲದೆ, ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸುವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಸೆ.23ರಂದು ಚಾಲನೆ ನೀಡಲಿದ್ದು, ಈ ಸಂಬಂಧ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲೆ ಮಾಜಿ ಸಚಿವ ಖಮರುಲ್ ಇಸ್ಲಾಮ್ ನಿಧನದ ಸುದ್ದಿ ಪರಮೇಶ್ವರ್ಗೆ ತಲುಪಿತು.
ಇದರಿಂದಾಗಿ, ಸಭೆಯನ್ನು ಮೊಟಕುಗೊಳಿಸಿದ ಕಾಂಗ್ರೆಸ್ ನಾಯಕರು, ಒಂದು ನಿಮಿಷ ವೌನಾಚರಣೆ ಮಾಡುವ ಮೂಲಕ ಖಮರುಲ್ ಇಸ್ಲಾಮ್ ನಿಧನಕ್ಕೆ ಸಂತಾಪ ಸೂಚಿಸಿದರು.





