ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆಯಿಂದ ಹೇಲ್ತ್ ಕಾರ್ಡ್ ವಿತರಣೆ: ಡಾ.ತ್ರಿಪುಲಾಂಬ

ದಾವಣಗೆರೆ, ಸೆ.23: 2019ರ ಅಕ್ಟೋಬರ್ 2ಕ್ಕೆ 150ನೆ ಗಾಂಧಿ ಜಯಂತಿ ಆಚರಿಸಲಾಗುತ್ತಿದ್ದು, ಈ ವೇಳೆಗೆ ಭಾರತವನ್ನು ಬಯಲು ಬಹಿರ್ದೆಸೆ ಮುಕ್ತ ದೇಶವನ್ನಾಗಿಸುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ.ತ್ರಿಪುಲಾಂಬ ಹೇಳಿದರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಶನಿವಾರ ಭಾರತೀಯ ರಿಸರ್ವ್ ಬ್ಯಾಂಕ್ ನೋಂದಾಯಿತ, ಎನ್‍ಬಿಎಫ್‍ಸಿ-ಎಂಎಫ್‍ಐ ಗ್ರಾಮೀಣ ಕೂಟ ಫಿನಾನ್ಯಿಯಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಮೀಣ ಕೂಟ ನೀರು, ನೈರ್ಮಲ್ಯ ಹಾಗೂ ಡಿಜಿಟಲ್ ಆರ್ಥಿಕ ಸಾಕ್ಷರತೆಯ ಬಗ್ಗೆ ಜಾಗೃತಿ ಆಂದೋಲ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಎಲ್ಲರ ಮನೆಗಳಲ್ಲಿ ಟಿವಿ, ಮೊಬೈಲ್‍ಗಳು ಇರುತ್ತವೆ. ಅದೇ ರೀತಿಯಲ್ಲಿ ಮನೆಗೊಂದು ಶೌಚಾಲಯ ನಿರ್ಮಾಣ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2014ರಲ್ಲಿ ಸ್ವಚ್ಛ ಭಾರತ್ ಅಭಿಯಾನ ಯೋಜನೆ ಆರಂಭಿಸಿ ಭಾರತವನ್ನು ಬಯಲು ಶೌಚ ಮುಕ್ತವನ್ನಾಗಿಸಲು ಮುಂದಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಯಲು ಬಹಿರ್ದೆಸೆ ಮುಕ್ತವಾಗಿ ಆರೋಗ್ಯ ಪೂರ್ಣರಾಗಿ ಎಂದ ಅವರು, 2020ರ ವೇಳೆಗೆ ಭಾರತದಲ್ಲಿ ಎಲ್ಲರು ಆರೋಗ್ಯವಂತರಾಗಿರುವುದಕ್ಕೆ ಪ್ರಯತ್ನಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹೇಲ್ತ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಗ್ರಾಮೀಣ ಕೂಟ ಪ್ರಾದೇಶಿಕ ವ್ಯವಸ್ಥಾಪಕ ಮಂಜುನಾಥ್ ಮಾತನಾಡಿ, ಗ್ರಾಮೀಣ ಕೂಟ ಫಿನಾನ್ಯಿಯಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಮೀಣ ಬಡ ಜನತೆ ಹಾಗೂ ಕಡಿಮೆ ಆದಾಯದ ಕುಟುಂಬಗಳಿಗಾಗಿ ಮತ್ತು ಮಹಿಳೆಯರ ಜೀವನಕ್ಕೆ ಸಾಲವನ್ನು ನೀಡಲಾಗುತ್ತಿದ್ದು, ಹಾಗೆಯೇ ಮರುಪಾವತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಲಯ ವ್ಯವಸ್ಥಾಪಕ ಕೆ.ಕೆ. ರಂಗನಾಥ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎರ್ರಿಸ್ವಾಮಿ, ಅಭಿವೃದ್ಧಿ ಅಧಿಕಾರಿ ಪುನೀತ್ ಮತ್ತಿತರರು ಇದ್ದರು.







