ಈಶ್ವರಪ್ಪರಿಗೆ ತಲೆ ಕೆಟ್ಟಿದೆ: ಸಚಿವ ರೇವಣ್ಣ ಟೀಕೆ

ಯಾದಗಿರಿ, ಸೆ. 24: ‘ಮನೆ ಮನೆಗೆ ಕಾಂಗ್ರೆಸ್ ಅಭಿಯಾನವನ್ನು ‘ಕಳ್ಳರ ನಡಿಗೆ’ ಎಂದು ಟೀಕಿಸಿರುವ ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಓರ್ವ ತಲೆ ಕೆಟ್ಟ ರಾಜಕಾರಣಿ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಇಂದಿಲ್ಲಿ ಟೀಕಿಸಿದ್ದಾರೆ.
ರವಿವಾರ ಯಾದಗಿರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದೆ, ಬಿಜೆಪಿ ಮುಖಂಡರು ತಲೆಕೆಟ್ಟವರಂತೆ ಮನಸೋ ಇಚ್ಛೆ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಈ ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದ ವೇಳೆ ರಾಜ್ಯದ ಬೊಕ್ಕಸವನ್ನು ಕೊಳ್ಳೆ ಹೊಡೆದ ಬಿಜೆಪಿ, ಇದೀಗ ಕಾಂಗ್ರೆಸ್ ನೇತೃತ್ವದ ಸರಕಾರದ ಬಗ್ಗೆ ಮಾತನಾಡುತ್ತಿದೆ. ಈ ಬಗ್ಗೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಜನ ಮನ್ನಣೆ ಪಡೆದ ನಾಯಕ. ಅವರ ಅಧಿಕಾರಾವಧಿಯಲ್ಲಿ ರಾಜ್ಯ ಅಭಿವೃದ್ಧಿ ಕಂಡಿದೆ. ಬಿಜೆಪಿಯ ಯಡಿಯೂರಪ್ಪರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಕಾರಂತ ಬಡಾವಣೆ ಡಿ-ನೋಟಿಫೈ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ಕೇವಲ ತಾತ್ಕಾಲಿಕ. ಆ ಪ್ರಕರಣ ಖುಲಾಸೆಯಾಗಿಲ್ಲ ಎಂದರು.
ಕಾಂಗ್ರೆಸ್ ನೇತೃತ್ವದ ಸರಕಾರ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದೆ. ರಾಜ್ಯ ಸರಕಾರ ಯೋಜನೆಗಳನ್ನು ಜನರಿಗೆ ತಲುಪಿಸಲು ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ, ರಾಜ್ಯ ಬಿಜೆಪಿ ಮುಖಂಡರಿಗೆ ಶಾಕ್ ಟ್ರೀಟ್ಮೆಂಟ್ ನೀಡಿದ ಬಳಿಕ ಎಚ್ಚೆತ್ತು ಕೊಂಡಿದ್ದು, ಅಧಿಕಾರ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅದು ಯಾವುದೇ ಕಾರಣಕ್ಕೂ ಫಲ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.







