ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಿದರೆ ಭವಿಷ್ಯದಲ್ಲಿ ಯಶಸ್ಸು ಸಾಧ್ಯ: ಕೆ.ಸಿ.ರತನ್

ಮೂಡಿಗೆರೆ, ಸೆ.24: ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವ ಮನೋಭಾವನೆಯನ್ನು ವಿದ್ಯಾರ್ಥಿಗಳು ತೊಡಗಿಸಿಕೊಂಡರೆ ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯ ಕಾಣಲು ಸಾಧ್ಯ ಎಂದು ತಾಪಂ ಅಧ್ಯಕ್ಷ ಕೆ.ಸಿ.ರತನ್ ಅಭಿಪ್ರಾಯಪಟ್ಟಿದ್ದಾರೆ.
ರವಿವಾರ ಪಟ್ಟಣದ ಲ್ಯಾಂಪ್ಸ್ ಸಹಕಾರ ಸಂಘದ ಕಟ್ಟದಲ್ಲಿ ಹೆಜ್ಜೆ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಎಸ್‍ಡಿಎ ಮತ್ತು ಎಫ್‍ಡಿಎ ಪೂರ್ವಭಾವಿ ಪರೀಕ್ಷೆ ಉಚಿತ ತರಬೇತಿ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಲೆನಾಡು ಭಾಗದ ಜನರು ಸರಕಾರಿ ಹುದ್ದೆ ಪಡೆಯಲು ಹಿಂದೇಟು ಹಾಕುತ್ತಿರುವುದರಿಂದ ಶೇ.80ರಷ್ಟು ಸರಕಾರಿ ನೌಕರರು ಚಿಕ್ಕಮಗಳೂರು ಜಿಲ್ಲೆಗೆ ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ವಿವಿಧ ಹುದ್ದೆಗಳನ್ನು ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದರಿಂದ ಈ ಭಾಗದ ಜನರ ಸಮಸ್ಯೆ ಪರಿಹರಿಸಲು ಸಾಧ್ಯವಾಗುವುದಿಲ್ಲ. ಸರಕಾರದ ಯಾವುದೇ ಹುದ್ದೆಯಾದರೂ ಸರಿಯೆ, ಆ ಹುದ್ದೆಯ ಬಗ್ಗೆ ಕೀಳು ಭಾವನೆ ಕಾಣುವುದನ್ನು ಮೊದಲು ಬಿಡಬೇಕು. ಸಮಯವನ್ನು ಒಮ್ಮೆ ಕಳೆದುಕೊಂಡರೆ ಮತ್ತೆ ಮರುಕಳಿಸುವುದಿಲ್ಲ. ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪತ್ರಕರ್ತ ಅಬ್ಬಾಸ್ ಕಿರುಗುಂದ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ದೊಡ್ಡ ದೊಡ್ಡ ನಗರಗಳಲ್ಲಿ ತರಬೇತಿ ಪಡೆಯಲು 25.ಸಾವಿರ ವರೆಗೆ ಹಣ ನೀಡುವಂತಹ ಪರಿಸ್ಥಿತಿ ಇದೆ. ಇದರಿಂದ ಸಮಾನ್ಯ ಜನರು ಪರೀಕ್ಷೆಯನ್ನು ಎದುರಿಸಲು ಸಾಧ್ಯವಾಗದೇ ಪ್ರತಿಭಾವಂತರು ಅವಕಾಶ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಉಚಿತವಾಗಿ ನೀಡುವಂತಹ ಇಂತಹ ತರಬೇತಿ ಶಿಬಿರಗಳ ಸದುಪಯೋಗ ಪಡೆದುಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಿ ಯಶಸ್ಸು ಕಾಣಬೇಕೆಂದು ಹಾರೈಸಿದರು.
ಜೆಸಿಐ ಸಂಸ್ಥೆ ಅಧ್ಯಕ್ಷ ನಯನ ಕಣಚೂರು ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಮುಂದಿನ ಭವಿಷ್ಯದ ಬಗ್ಗೆ ಕನಸು ಕಾಣುವ ಹವ್ಯಾಸ ಮೂಡಿಸಿಕೊಳ್ಳಬೇಕು. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಉನ್ನತ ಹುದ್ದೆಯನ್ನು ಅಲಂಕರಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ವಾಸುದೇವ್ ಪ್ರಾಸ್ತಾವಿಕ ಮಾತನಾಡಿದರು. ಉದಯಶಂಕರ್, ನಾಜೀಮ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







