ಮಿಲಿಟರಿ ಜಾಗ ಕ್ರೀಡಾ ಇಲಾಖೆಗೆ ವರ್ಗಾವಣೆ: ಯಥಾಸ್ಥಿತಿ ಕಾಯ್ದುಕೊಳ್ಳಲು ಡಿಸಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಸೆ.28: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಹೋಬಳಿಯ ಮಾರ್ಪಾಡಿ ಗ್ರಾಮದಲ್ಲಿ ಭಾರತೀಯ ರಕ್ಷಣಾ ಸಚಿವಾಲಯಕ್ಕೆ ಸೇರಿದ 28 ಎಕರೆ 35 ಗುಂಟೆ ವಿಸ್ತೀರ್ಣದ ಮಿಲಟರಿ ಮೈದಾನದ ಜಾಗವನ್ನು ರಾಜ್ಯ ಯುವಜನ ಸೇವೆಗಳು ಮತ್ತು ಕ್ರೀಡಾ ಇಲಾಖೆಗೆ ವರ್ಗಾವಣೆ ಮಾಡಿರುವ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿಗೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.
ಮಿಲಿಟರಿ ಮೈದಾನವನ್ನು ವರ್ಗಾವಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ರದ್ದುಕೋರಿ ಸಾಮಾಜಿಕ ಕಾರ್ಯಕರ್ತ ಎಂ.ಸುರೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ರಜಾಕಾಲದ ಪೀಠ ಈ ಮಧ್ಯಂತರ ಆದೇಶ ನೀಡಿತು. ಅಲ್ಲದೆ, ಅರ್ಜಿ ಸಂಬಂಧ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ರಾಜ್ಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಮೂಡಬಿದಿರೆಯ ಮಾರ್ಪಾಡಿ ಗ್ರಾಮದಲ್ಲಿ ಸರ್ವೇ ಸಂಖ್ಯೆ 123/2ಎ ರಲ್ಲಿರುವ 28 ಎಕರೆ 35 ಗುಂಟೆ ಜಾಗವು ರಕ್ಷಣಾ ಸಚಿವಾಲಯಕ್ಕೆ ಸೇರಿದೆ. ಆದರೆ, ಜಿಲ್ಲಾಧಿಕಾರಿಯು ಈ ಜಾಗವನ್ನು ರಾಜ್ಯ ಯುವಜನ ಸೇವೆಗಳು ಹಾಗೂ ಕ್ರೀಡಾ ಇಲಾಖೆಗೆ ವರ್ಗಾವಣೆ ಮಾಡಿ 2010ರ ಫೆ.5ರಂದು ಆದೇಶಿಸಿದ್ದರು. ಈ ಜಾಗವನ್ನು ಮಂಗಳೂರು ವಿಮಾನ ನಿಲ್ದಾಣ ಹಾಗೂ ಮಂಗಳೂರು ಬಂದರಿಗೆ ಸಮೀಪವಿದ್ದು, ರಕ್ಷಣಾ ಇಲಾಖೆಯ ಕಾರ್ಯಚಟುವಟಿಕೆಗಳಿಗಾಗಿ ಮೀಸಲಿಡಲಾಗಿದೆ. ಸ್ಥಳೀಯರು ಈ ಜಮೀನು ಒತ್ತುವರಿ ಮಾಡಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ರಕ್ಷಣಾ ಸಚಿವಾಲಯ ಸುಪರ್ದಿಯಲ್ಲಿರುವ ಈ ಜಮೀನು ವರ್ಗಾವಣೆಯಿಸಲಾಗಿದೆ. ಹೀಗಾಗಿ, ಜಿಲ್ಲಾಧಿಕಾರಿಗಳ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.







