ಅ. 3ರಂದು ಜನಜಾಗೃತಿ ಸಮಾವೇಶ
ಪುತ್ತೂರು, ಸೆ. 30: ಗಾಂಧಿ ಜಯಂತಿ ಪ್ರಯುಕ್ತ ಅ. 3ರಂದು ಬೆಳಗ್ಗೆ 10.30ಕ್ಕೆ ಪುತ್ತೂರು ಪುರಭವನದಲ್ಲಿ ಜನಜಾಗೃತಿ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದರು.
ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕಿ ಶಕುಂತಳಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನಗರಸಭೆ ಅಧ್ಯಕ್ಷೆ ಜಯಂತಿ ಬಲ್ನಾಡು, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್, ಮದ್ಯಪಾನ ಸಂಯಮ ಮಂಡಳಿ ಸದಸ್ಯ ಭಾಸ್ಕರ ಕೋಡಿಂಬಾಳ, ಪುಡಾ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಪೂರ್ವಾಹ್ನ ಜಾಗೃತಿ ಜಾಥಾ ನಡೆಯಲಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ ಉದ್ಘಾಟಿಸಲಿದ್ದಾರೆ. ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಉಪಸ್ಥಿತರಿರುವರು ಎಂದರು.
ರಾಜ್ಯಾದ್ಯಂತ 74 ಜಿಲ್ಲಾ ಕೇಂದ್ರಗಳಲ್ಲಿ ಅ.2ರಂದು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನಜಾಗೃತಿ ಜಾಥಾ, ವ್ಯಸನಮುಕ್ತರಿಗೆ ಸನ್ಮಾನ, ಹಕ್ಕೊತ್ತಾಯ ಕಾರ್ಯಕ್ರಮ, ಸಮಾವೇಶ ಏರ್ಪಡಿಸಲಾಗಿದೆ. ರಾಜ್ಯಾದ್ಯಂತ ನಡೆಯುವ ಕಾರ್ಯಕ್ರಮಗಳಿಗೆ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಆಡಿಯೋ ರೆಕಾರ್ಡಿಂಗ್ ಮೂಲಕ ಸಂದೇಶ ಕಳುಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಕೊಡಗು ಜಿಲ್ಲಾ ನಿರ್ದೇಶಕ ಸೀತಾರಾಮ ಶೆಟ್ಟಿ, ಪುತ್ತೂರು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ವಲಯಾಧ್ಯಕ್ಷೆ ಸ್ವರ್ಣಲತಾ ಹೆಗ್ಡೆ, ವಲಯ ಜನಜಾಗೃತಿ ಅಧ್ಯಕ್ಷೆ ಪ್ರಶಾಂತ್ ಮುರ, ಪ್ರಚಾರ ಸಮಿತಿ ಸಂಚಾಲಕ ಕೃಷ್ಣ ಕುಮಾರ್, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ತಾಲೂಕು ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ, ಮೇಲ್ವಿಚಾರಕಿ ಪಾವನಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಜಾತಾ ಉಪಸ್ಥಿತರಿದ್ದರು.







