ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಿಸಿ : ಸಚಿವರು-ಶಾಸಕರಿಗೆ ವೇಣುಗೋಪಾಲ್ ಖಡಕ್ ಸೂಚನೆ

ಬೆಂಗಳೂರು, ಅ.6: ಸಾಮಾಜಿಕ ಜಾಲತಾಣಗಳಲ್ಲಿ 10 ಸಚಿವರು ಹಾಗೂ 40 ಶಾಸಕರು ಸಕ್ರಿಯವಾಗಿರಲಿಲ್ಲ. ಅವರಿಗೆ ಸಾಮಾಜಿಕ ಜಾಲ ತಾಣಗಳಲ್ಲಿ ಕೂಡಲೆ ಸಕ್ರಿಯವಾಗಿರುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಹೇಳಿದ್ದಾರೆ.
ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳ ಮೂಲಕ ತ್ವರಿತವಾಗಿ ಜನರನ್ನು ತಲುಪಲು ಸಾಧ್ಯ. ಆದುದರಿಂದ, ನೀವು ಸರಕಾರ ಹಾಗೂ ಪಕ್ಷದ ಕಾರ್ಯಕ್ರಮಗಳ ಪ್ರಚಾರಕ್ಕೆ ಒತ್ತು ನೀಡುವಂತೆ ಸೂಚಿಸಿದ್ದಾರೆ ಎಂದರು.
ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಶಾಸಕರು ಖುದ್ದಾಗಿ ಭಾಗವಹಿಸಬೇಕು. ಪಕ್ಷದ ಕಾರ್ಯಕ್ರಮಗಳನ್ನು ಹೆಚ್ಚು ಪ್ರಚಾರ ಮಾಡಬೇಕು ಎಂದು ಸೂಚಿಸಿದ್ದಾರೆ. ಅಲ್ಲದೆ, ಬೆಂಗಳೂರು ನಗರದ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಜನರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ವೇಣುಗೋಪಾಲ್ ಸೂಚನೆ ನೀಡಿದ್ದಾರೆ ಎಂದು ದಿನೇಶ್‌ಗುಂಡೂರಾವ್ ತಿಳಿಸಿದರು.
ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವಂತೆ ಬೆಂಗಳೂರು ನಗರದ ಕಾಂಗ್ರೆಸ್ ಶಾಸಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಂದಿನ ಸಭೆಗಳಲ್ಲಿ ಬಂದಿರುವ ಮಾಹಿತಿಯ ಪ್ರಕಾರ ಪಕ್ಷದ ಬಗ್ಗೆ ಮತ್ತು ಸರಕಾರದ ಸಾಧನೆಗಳ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯ ಇದೆ ಎಂದು ಅವರು ಹೇಳಿದರು.
ಬೆಂಗಳೂರು ನಗರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚಿನ ಅನುದಾನ ನೀಡಿದ್ದಾರೆ. ಅದನ್ನು ಸದುಪಯೋಗಪಡಿಸಿಕೊಂಡು ನಗರದ ಸಮಸ್ಯೆಗಳನ್ನು ಪರಿಹಾರ ಮಾಡಬೇಕು. ನಗರದಲ್ಲಿ ಮಳೆಯಿಂದ ಆಗಿರುವ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚಿನ ಮುತುವರ್ಜಿವಹಿಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ದಿನೇಶ್‌ಗುಂಡೂರಾವ್ ತಿಳಿಸಿದರು.







