ಅ.8 ರಂದು ಭೋವಿ ಅಭಿವೃದ್ಧಿ ನಿಗಮ ಲೋಕಾರ್ಪಣೆ
ಬೆಂಗಳೂರು, ಅ.7: ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಲೋಕಾರ್ಪಣೆ ಸಮಾರಂಭ ಅ.8 ರಂದು ನಗರದ ಪೀಣ್ಯ ಮೊದಲ ಹಂತದಲ್ಲಿರುವ ಡಾ.ಪ್ರಭಾಕರ್ ಕೋರೆ ಕನ್ವೆನ್ಷನ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಿಗಮದ ಅಧ್ಯಕ್ಷ ಜಿ.ವಿ.ಸೀತಾರಾಮು ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದಂತೆ ಈ ನಿಗಮ ಸ್ಥಾಪಿಸಲಾಗಿದೆ. ಇದರ ಮೂಲಕ ಮಹಿಳೆಯರು ಹಾಗೂ ಬಡವರ ಸಬಲೀಕರಣಕ್ಕಾಗಿ 25 ಸಾವಿರದಿಂದ 5 ಲಕ್ಷದವರೆಗೆ ಸಾಲ ಸೌಲಭ್ಯ ಸೇರಿದಂತೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಭೋವಿ ಸಮುದಾಯವರು ಆರ್ಥಿಕ, ಶೈಕ್ಷಣಿಕವಾಗಿ ತೀರ ಹಿಂದುಳಿದಿದ್ದಾರೆ. ಹೀಗಾಗಿ, ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭೋವಿ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಉನ್ನತ ಶಿಕ್ಷಣದಲ್ಲಿ ನಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು ಎಂದು ಈ ವೇಳೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸಚಿವ ಎಚ್.ಆಂಜನೇಯ, ಶಾಸಕ ಮುನಿರತ್ನ, ಭೋವಿ ಗುರುಪೀಠ ಮಹಾ ಸಂಸ್ಥಾನದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದರು.







