ಸಿಎಂ ಅಭಿವೃದ್ಧಿ ಮಾಡಿದ್ದಲ್ಲಿ ಶ್ವೇತ ಪತ್ರ ಹೊರಡಿಸಲಿ: ಯಡಿಯೂರಪ್ಪ
'ನಾಲ್ಕುವರೆ ವರ್ಷಗಳಲ್ಲಿ ಹಿಂದುಳಿದ ವರ್ಗಗಳಿಗೆ ಸಿಕ್ಕಿದ್ದು ಕೇವಲ ಭರವಸೆ'

ಬೆಂಗಳೂರು, ಅ.7: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ನಾಲ್ಕುವರೆ ವರ್ಷಗಳ ಆಡಳಿತ ಅವಧಿಯಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಸಮುದಾಯದ ಜನರಿಗೆ ಒದಗಿಸಿರುವ ಅಭಿವೃದ್ಧಿ ಕಾರ್ಯಕ್ರಮಗಳ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಶನಿವಾರ ನಗರದ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗದವರಿಗೆ ಸಿದ್ದರಾಮಯ್ಯನವರು ಕೇವಲ ಭರವಸೆಗಳನ್ನು ನೀಡುವ ಮೂಲಕ ಜನರನ್ನು ಮರುಳು ಮಾಡಿದ್ದಾರೆ ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್ ಆದೇಶವನ್ನು ಮೀರಿ ಶೆ.70 ರಷ್ಟು ಮೀಸಲಾತಿ ನೀಡುವ ನಾಟಕ ಮಾಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಭೆ ಸಮಾರಂಭಗಳಲ್ಲಿ ಈ ವಿಷಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ತಿನ ಪ್ರತಿ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಮಾತನಾಡಿ, ವಿಚಾರವಾದಿ ಗೌರಿ ಲಂಕೇಶರ ಹತ್ಯೆ ನಡೆದು ತಿಂಗಳು ಕಳೆದರೂ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಸರಕಾರ ವಿಫಲವಾಗಿದೆ. ಆ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಹೇಳಿದರು.
ಮುಖ್ಯಮಂತ್ರಿಯಾಗಲು ನೆರವಾಗಿದ್ದ ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪೂರ್ಣವಾಗಿ ಕಡೆಗಣಿಸಿದರು. ಇಂತಹ ಹಿಂದುಳಿದ ವರ್ಗದ ನಾಯಕರನ್ನೇ ಮೂಲೆ ಗುಂಪು ಮಾಡಿದ ಸಿದ್ದರಾಮಯ್ಯ ಯಾವ ಹಿಂದುಳಿದ ವರ್ಗದವರ ಉದ್ಧಾರ ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು ಸೇರಿದಂತೆ ಇತರರು ಇದ್ದರು.







