ಸಚಿವ ತನ್ವೀರ್ ಸೇಠ್ ನಿವಾಸಕ್ಕೆ ನುಗ್ಗಿ ದಾಂಧಲೆ ಆರೋಪ: 21ಮಂದಿ ಬಂಧನ

ಬೆಂಗಳೂರು, ಅ.7: ರಾಜ್ಯದ ಕೆಲ ಖಾಸಗಿ ಶಾಲಾ-ಕಾಲೇಜುಗಳು ಪಾಲಕರಿಂದ ದುಬಾರಿ ಶಾಲಾ ಶುಲ್ಕ ವಸೂಲಿ ಮಾಡುತ್ತಿರುವ ಸಂಬಂಧ ಕ್ರಮ ಕೈಗೊಳ್ಳಲು ವಿಫಲವಾಗಿದ್ದೀರಿ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಕಾರ್ಯಕರ್ತರು, ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿದರು.
ಶನಿವಾರ ನಗರದ ಗಾಲ್ಫ್ ಕೋರ್ಟ್ ರಸ್ತೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಯುವ ಸೇನೆಯ ಕಾರ್ಯಕರ್ತರು, ಸಚಿವರ ನಿವಾಸದ ಆವರಣದಲ್ಲಿದ್ದ ಹೂ ಕುಂಡ ಹಾಗೂ ಕಿಟಕಿಯ ಗಾಜುಗಳನ್ನು ಪುಡಿ ಮಾಡಿ, ತಡೆಯಲು ಬಂದ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಂಘಟನೆಯ 21 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಶನಿವಾರ ಬೆಳಗ್ಗೆ ಸಚಿವರ ನಿವಾಸದ ಬಳಿ ಜಮಾವಣೆಗೊಂಡ ನೂರಕ್ಕೂ ಹೆಚ್ಚು ಕಾರ್ಯಕರ್ತರು, ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪೋಷಕರಿಂದ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ರಾಜ್ಯ ಸರಕಾರ ಮತ್ತು ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅನುಮತಿ ಇಲ್ಲ: ಸಚಿವ ತನ್ವೀರ್ ಸೇಠ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ಯಾವುದೇ ಅನುಮತಿ ಪಡೆದಿರಲಿಲ್ಲ. ಅನಧಿಕೃತವಾಗಿ ಪ್ರತಿಭಟನೆ ನಡೆಸಿ ಸಚಿವರ ಮನೆಗೆ ಮುತ್ತಿಗೆ ಹಾಕಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದ ಕೆಲ ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿದ್ದಾರೆ. ಹಾಗಾಗಿ ದೂರು ದಾಖಲಿಸಿಕೊಂಡು 21 ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.







