ಬೀದಿ ಬದಿ ವ್ಯಾಪಾರಿಗಳು ಸರಕಾರಿ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕರೆ

ಬೆಂಗಳೂರು, ಅ.7: ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯವನ್ನು ಉತ್ತಮಪಡಿಸಲು ಕೇಂದ್ರ ಸರಕಾರವು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಕಾರ್ಯಕ್ರಮದಡಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಅವುಗಳನ್ನು ಬೀದಿ ಬದಿ ವ್ಯಾಪಾರಿಗಳು ಬಳಸಿಕೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್.ಪಾಲಯ್ಯ ಕರೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು, ರಾಜ್ಯ ಪೌರಾಡಳಿತ ನಿರ್ದೇಶನಾಲಯ, ಮೈಸೂರಿನ ರಾಜ್ಯ ನಗರಾಭಿವೃದ್ಧಿ ಸಂಸ್ಥೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಂಯುಕ್ತಾಶ್ರಯದಲ್ಲಿ ಬೀದಿ ಬದಿ ವ್ಯಾಪಾರಿಗಳಿಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಒಂದು ದಿನದ ತರಬೇತಿ ಕಾರ್ಯಾಗಾರವನು್ನ ಉದ್ಘಾಟಿಸಿ ಮಾತನಾಡಿದ ಅವರು, ನಗರದ ಆರ್ಥಿಕ ವ್ಯವಸ್ಥೆಗೆ ಬೀದಿ ಬದಿ ವ್ಯಾಪಾರಿಗಳ ಕೊಡುಗೆ ಅಪಾರವಾದುದು. ಇವರಿಗೆ ಆರ್ಥಿಕ ನೆರವು ನೀಡಲು ದೀನ-ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಕಾರ್ಯಕ್ರಮದ ಐದು ಉಪಘಟಕ ಯೋಜನೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಒದಗಿಸುವ ನೆರವು ಯೋಜನೆಯು ಒಂದಾಗಿದೆ ಎಂದು ಹೇಳಿದರು.
ಈ ಯೋಜನೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಮತ್ತು ನಿಯಂತ್ರಣ ಅಧಿನಿಯಮ 2014 ಹಾಗೂ 2016ರಡಿ, ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಗುರುತಿನ ಚೀಟಿ ನೀಡಿ ತರಬೇತಿ ನೀಡಲಾಗುತ್ತದೆ. ಅಲ್ಲದೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಂಯೋಜನೆ ಮಾಡುವುದರ ಮೂಲಕ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮೀತ್ ಸಿಂಗ್ ಮಾತನಾಡಿ, ಬೀದಿ ಬದಿ ವ್ಯಾಪಾರ ಮಾಡುವವರು ಬೀದಿ ವ್ಯಾಪಾರ ವಲಯಗಳಲ್ಲಿನ ಸಂಚಾರ ನಿಯಮಗಳನ್ನು ಪಾಲಿಸಬೇಕು. ಅಲ್ಲದೆ, ನಗರಾಭಿವೃದ್ಧಿ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಹೇಳಿದರು.
ಕಾರ್ಯಾಗಾರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕು, ಐದು ನಗರ ಸ್ಥಳೀಯ ಸಂಸ್ಥೆಗಳ ಟಿ.ವಿ.ಸಿ ಸದಸ್ಯರು, ಜನಪ್ರತಿನಿಧಿಗಳು, ಬೀದಿ ಬದಿ ವ್ಯಾಪಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಬೋಧಕ ಮಂಜುನಾಥ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಾಂತರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಹೇಮಂತ್ ಶರಣ್ ಉಪಸ್ಥಿತರಿದ್ದರು.







