ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಹಸೈನಾರ್ ಆಯ್ಕೆ

ಸಿದ್ದಾಪುರ, ಅ.8: ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರ ನಿರ್ದೇಶನದ ಮೇರೆಗೆ ಸಿದ್ದಾಪುರದ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ ಹಸೈನಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಎಐಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಖುರ್ಷಿದ್ ಅಹ್ಮದ್ ಸೈಯ್ಯದ್ ನೇಮಕಗೊಳಿಸಿರುವುದಾಗಿ ರಾಜ್ಯಾಧ್ಯಕ್ಷ ವೈ. ಸಯ್ಯದ್ ಅಹ್ಮದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಹಸೈನಾರ್, 1969 ರಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದು, ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಡಿಸಿಸಿ ಸದಸ್ಯನಾಗಿ, ಅಲ್ಪಸಂಖ್ಯಾತ ಘಟಕದ ಖಜಾಂಚಿ ಸೇರಿದಂತೆ ವಿವಿಧ ಘಟಕಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಇದೀಗ ತನ್ನನ್ನು ರಾಜ್ಯ ಉಪಾಧ್ಯಕ್ಷನಾಗಿ ಮಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್ ಮತ್ತು ಎಸ್.ಆರ್ ಪಾಟೀಲ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯುತ್ತಮ ಆಡಳಿತ ನಡೆಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಲಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವುದರ ಮೂಲಕ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂದು ಭವಿಷ್ಯ ನುಡಿದರು.





