ನ.1 ರಂದು ಆಶಿಷ್ ನೆಹ್ರಾ ನಿವೃತ್ತಿ

ಹೊಸದಿಲ್ಲಿ, ಅ.11: ಭಾರತದ ಹಿರಿಯ ವೇಗದ ಬೌಲರ್ ಆಶೀಷ್ ನೆಹ್ರಾ ತವರು ಮೈದಾನ ಫಿರೋಝ್ ಶಾ ಕೋಟ್ಲಾ ಸ್ಟೇಡಿಯಂನಲ್ಲಿ ನವೆಂಬರ್ 1 ರಂದು ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ನಿವೃತ್ತಿಯಾಗಲು ನಿರ್ಧರಿಸಿದ್ದಾರೆ.
38ರ ಹರೆಯದ ನೆಹ್ರಾ ಪ್ರಧಾನ ಕೋಚ್ ರವಿ ಶಾಸ್ತ್ರಿ ಹಾಗೂ ನಾಯಕ ವಿರಾಟ್ ಕೊಹ್ಲಿ ಬಳಿ ತನ್ನ ನಿವೃತ್ತಿಯ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1999ರಲ್ಲಿ ಮುಹಮ್ಮದ್ ಅಝರುದ್ದೀನ್ ನಾಯಕತ್ವದ ಭಾರತ ತಂಡದಲ್ಲಿ ಚೊಚ್ಚಲ ಪಂದ್ಯ ಆಡಿದ್ದ ನೆಹ್ರಾ ಈತನಕ ಭಾರತದ ಪರ 17 ಟೆಸ್ಟ್, 120 ಏಕದಿನ ಹಾಗೂ 26 ಟ್ವೆಂಟಿ-20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 44 ವಿಕೆಟ್‌ಗಳನ್ನು, ಏಕದಿನ ಹಾಗೂ ಟ್ವೆಂಟಿ-20ಯಲ್ಲಿ ಕ್ರಮವಾಗಿ 157 ಹಾಗೂ 34 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
ನೆಹ್ರಾ ಅವರನ್ನು ಇತ್ತೀಚೆಗೆ ಆಸ್ಟ್ರೇಲಿಯ ವಿರುದ್ಧದ 3 ಪಂದ್ಯಗಳ ಟ್ವೆಂಟಿ-20 ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಮೊದಲೆರಡು ಪಂದ್ಯಗಳಲ್ಲಿ ಆಡುವ 11ರ ಬಳಗದಲ್ಲಿ ಅವಕಾಶ ಪಡೆದಿಲ್ಲ. ತನ್ನ ತವರು ನೆಲದಲ್ಲಿ ಕ್ರಿಕೆಟ್‌ನಿಂದ ನಿವೃತ್ತಿಯಾಗಲು ಬಯಸಿರುವ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನ ವಿರುದ್ಧ ಅನಾರೋಗ್ಯದ ನಡುವೆಯೂ ಆಡಿ 23 ರನ್‌ಗೆ 6 ವಿಕೆಟ್‌ಗಳನ್ನು ಕಬಳಿಸಿ ಸ್ಮರಣೀಯ ಪ್ರದರ್ಶನ ನೀಡಿದ್ದರು.
2011ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ನೆಹ್ರಾ ಸೆಮಿಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಆದರೆ, ಬೆರಳುನೋವಿನಿಂದಾಗಿ ಫೈನಲ್ ಪಂದ್ಯದಿಂದ ಹೊರಗುಳಿದಿದ್ದರು.







