ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅ. 13: ಕಲಬರಗಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಇಂದಿಲ್ಲಿ ತಾಕೀತು ಮಾಡಿದ್ದಾರೆ.
ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆಗೆ ಪ್ರವಾಸೋದ್ಯಮ, ಲೋಕೋಪಯೋಗಿ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು. ಕಾಮಗಾರಿಗೆ ಅನುದಾನದ ಕೊರತೆ ಇಲ್ಲ. ಮುಂದಿನ ಆರು ತಿಂಗಳಿಗೆ ಅಗತ್ಯವಾದ ಹಣಕಾಸು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಪರಿಷ್ಕೃತ ಅಂದಾಜು ವೆಚ್ಚಕ್ಕೆ ಸಚಿವ ಸಂಪುಟದ ಮುಂದಿನ ಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದ ಅವರು, ಮೂಲಭೂತ ಸೌಕರ್ಯಗಳೊಂದಿಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಳಿಕ ವಿಮಾನಗಳ ಹಾರಾಟಕ್ಕೆ ಅನುಮತಿ ಪಡೆಯುವ ಸಂಬಂಧ ಕೇಂದ್ರ ಸರಕಾರದ ಜೊತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಿರಿಯ ಅಧಿಕಾರಿ ತುಷಾರ್ ಗಿರಿನಾಥ್ ಸೇರಿದಂತೆ ಇನ್ನಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.







