ವೇಣುಗೋಪಾಲ್ ವಿರುದ್ಧದ ಆರೋಪ ರಾಜಕೀಯ ಪ್ರೇರಿತ: ದಿನೇಶ್ ಗುಂಡೂರಾವ್

ಬೆಂಗಳೂರು, ಅ.13: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪವು ರಾಜಕೀಯ ಪ್ರೇರಿತವಾದದ್ದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಣುಗೋಪಾಲ್ ಯಾವುದೇ ತಪ್ಪು ಮಾಡಿಲ್ಲ. ಇದೊಂದು ರಾಜಕೀಯ ಪ್ರೇರಿತ ಹುನ್ನಾರವಾಗಿತ್ತು. ಈ ಪ್ರಕರಣವು ಕೇರಳದಲ್ಲಿ ದೊಡ್ಡ ಅಲೆಯನ್ನು ಎಬ್ಬಿಸಿತ್ತು ಎಂದರು.
ಕೇಂದ್ರ ಸರಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ವಿಚಾರಣಾ ಸಮಿತಿಯನ್ನು ರಚಿಸಿತ್ತು. ಈಗಾಗಲೇ ಸಮಿತಿಯು ಸರಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದರು.
ವೇಣುಗೋಪಾಲ್ ತಮ್ಮ ವಿರುದ್ಧ ಹೊರಿಸಲಾಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ಆಧಾರ ನೀಡುವಂತೆ ಕೇಳಿದ್ದರು. ಆದರೆ, ಆರೋಪ ಹೊರಿಸಿದ್ದ ಮಹಿಳೆಯು ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡಿಲ್ಲ. ಹೀಗಾಗಿ ಇದೊಂದು ರಾಜಕೀಯ ಪ್ರೇರಿತ ಹುನ್ನಾರವಾಗಿದೆ. ವೇಣುಗೋಪಾಲ್ ಯಾವುದೇ ತಪ್ಪು ಮಾಡಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ವಿರುದ್ಧ ಯಾವುದೇ ಆರೋಪಗಳ ಇಲ್ಲದಿರುವುದರಿಂದ ರಾಜ್ಯದಲ್ಲಿ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಗ್ರಾಮೀಣ ಬ್ಯಾಂಕುಗಳಲ್ಲಿ ಉದ್ಯೋಗ ನೀಡುವಲ್ಲಿ ಕನ್ನಡಿಗರಿಗೆ ಅನ್ಯಾಯ ಆಗುತ್ತಿರುವ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ, ರಾಜ್ಯ ಬಿಜೆಪಿಯ ಯಾವ ನಾಯಕರೂ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರು ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ಮಾಡಿ ಕಾಲಹರಣ ಮಾಡುವ ಬದಲು, ನಾಡಿನ ಹಿತದ ಕುರಿತು ಧ್ವನಿ ಎತ್ತಲಿ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ರಾಜ್ಯದ 17 ಬಿಜೆಪಿ ಸಂಸದರು ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಚುನಾವಣೆಗೆ ಅನುಕೂಲ ಆಗುವುದಕ್ಕೆ ಮಾತ್ರ ಹೋರಾಟ ಮಾಡುತ್ತಾರೆ ಎಂದರು.







