ರೋಶನ್ ಬೇಗ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಸ್ತೆ ತಡೆ: ಬಂಧನ, ಬಿಡುಗಡೆ

ಉಡುಪಿ, ಅ.17: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಸಚಿವ ರೋಶನ್ ಬೇಗ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂಬಲಪಾಡಿ ಜಂಕ್ಷನ್‌ನಲ್ಲಿ ಮಂಗಳವಾರ ರಸ್ತೆ ತಡೆ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಶೆಟ್ಟಿ ಮಾತನಾಡಿ, ರೋಶನ್ ಬೇಗ್ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ದೇಶದ ಸಾರ್ವಭೌಮಕ್ಕೆ ಅಗೌರವ ತೋರಿದಂತೆ ಆಗುತ್ತದೆ. ಆದುದರಿಂದ ರೋಶನ್ ಬೇಗ್ ಕೇವಲ ಕ್ಷಮೆಯಾಚನೆ ಮಾಡಿದರೆ ಸಾಲದು. ಅವರು ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಬಳಿಕ ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಳಿತು ರಸ್ತೆ ತಡೆ ನಡೆಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಸ್ತೆ ತಡೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಯಶ್ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ನಳಿನಿ ಪ್ರದೀಪ್ ರಾವ್, ಶ್ಯಾಮಲಾ ಕುಂದರ್, ಗೀತಾಂಜಲಿ ಸುವರ್ಣ, ಸಂಧ್ಯಾ ರಮೇಶ್, ಆರೀಫ್ ದೊಡ್ಡಣಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.







