ಹರ್ಯಾಣಿ ಗಾಯಕಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಹೊಸದಿಲ್ಲಿ, ಅ.17: ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮನೆಗೆ ಹಿಂದಿರುಗುತ್ತಿದ್ದ ಗಾಯಕಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಆಕೆಯನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಹರ್ಯಾಣದ ಪಾಣಿಪತ್ ಜಿಲ್ಲೆಯ ಚಮ್ರಾರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಗಾಯಕಿಯನ್ನು ಹರ್ಷಿತಾ ದಹಿಯಾ ಎಂದು ಗುರುತಿಸಲಾಗಿದೆ. ಚಮ್ರಾರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಹರ್ಷಿತಾ ಇತರ ಮೂವರೊಡನೆ ಮನೆಗೆ ಹಿಂದಿರುಗುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಕಾರಿನಲ್ಲಿ ಆಗಮಿಸಿದ ಇಬ್ಬರು ಆಕೆಗೆ ಗುಂಡಿಕ್ಕಿದ್ದಾರೆ.
ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಇತರ ಮೂವರೊಡನೆ ಕೆಳಗಿಳಿಯುವಂತೆ ಹೇಳಿದ್ದು, ನಂತರ ಹರ್ಷಿತಾ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪಾಣಿಪತ್ ಸುಪರಿಂಟೆಂಡೆಂಟ್ ಆಫ್ ಪೊಲೀಸ್ ರಾಹುಲ್ ಶರ್ಮಾ ಮಾಹಿತಿ ನೀಡಿದ್ದಾರೆ.
ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಪಾಣಿಪತ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.





