ಗಾಂಜಾ ಮಾರಾಟ: ಆರೋಪಿ ಸೆರೆ
ಮಂಗಳೂರು, ಅ. 17: ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಗಾಂಜಾದೊಂದಿಗೆ ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಅಮ್ಮುಂಜೆಯ ಕಳಾಯಿ ಹೊಸನಗರ ನಿವಾಸಿ ಮಹಮ್ಮದ್ ಇಝುದ್ದೀನ್ (32) ಎಂದು ಗುರುತಿಸಲಾಗಿದೆ. ಬಸ್ ಕಂಡಕ್ಟರ್ ಆಗಿರುವ ಈತ ಸೋಮವಾರ ನಗರದ ಪಂಪ್‌ವೆಲ್ ವೃತ್ತದ ಬಳಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಆರೋಪಿಯಿಂದ 200 ಗ್ರಾಂ ಗಾಂಜಾ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಗಾಂಜಾವನ್ನು ಕೇರಳದ ಕುಂಜತ್ತೂರು ಬಳಿಯಿಂದ ಖರೀದಿ ಮಾಡಿ ತಂದಿುವುದಾಗಿ ತನಿಖೆಯಿಂದ ತಿಳಿದುಬಂದಿದೆ.
ಈತನ ವಿರುದ್ಧ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.





